ಕುಶಾಲನಗರ, ಸೆ. 17: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಕೆಲಸ ಕಾರ್ಯದಲ್ಲಿ ಮೂಗು ತೂರಿಸುತ್ತಿರುವ ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ವರ್ತನೆಗೆ ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಬಿ.ಡಿ.ಅಣ್ಣಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಆದರೆ ಎ.ಕೆ.ಸುಬ್ಬಯ್ಯ ಅವರು ಪ್ರಕರಣದಲ್ಲಿ ಮೂಗು ತೂರಿಸಿ, ಪೊಲೀಸರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಅನಗತ್ಯ ಆರೋಪ ಮಾಡಿರುವದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ಪೊಲೀಸರು ಸಂವಿಧಾನ ಹಾಗೂ ಕಾನೂನು ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಯೇ ಹೊರತು ಯಾವದೇ ಜಾತಿ, ಜನಾಂಗದ ಪರವಾಗಲಿ ಅಥವಾ ವಿರುದ್ಧವಾಗಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಪೊಲೀಸರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ಸುಬ್ಬಯ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಅಣ್ಣಯ್ಯ ಆಗ್ರಹಿಸಿದ್ದಾರೆ.