ಮಡಿಕೇರಿ, ನ. 29: ಪಜಾಪ್ರಭುತ್ವ ವ್ಯವಸ್ಥೆಯನ್ನು ಉತ್ತಮ ಪಡಿಸುವಲ್ಲಿ ಪ್ರಜೆಗಳು ಜಾಗೃತರಾಗುವದು ಅವಶ್ಯಕ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್‍ಕೆಜಿ ಎಂ.ಎಂ. ಮಹಾಸ್ವಾಮೀಜಿ ಹೇಳಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್ ಮಾತನಾಡಿ, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಂವಿಧಾನದ ಭದ್ರಬುನಾದಿಗಳಾಗಿವೆ. ಇದರ ಜೊತೆಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಣಬಹುದಾಗಿದೆ. ಮಾತೃತ್ವಕ್ಕೆ, ವ್ಯಕ್ತಿ ಗೌರವಗಳನ್ನು ಒಳಗೊಂಡಿರುವ ಭಾರತದ ಸಂವಿಧಾನ ಪ್ರಸ್ತಾವನೆಯು ಅತ್ಯಂತ ಯಶಸ್ವಿಯಾಗಿ ಕಾರ್ಯರೂಪ ಗೊಂಡಿದೆ. ಇದರ ರಚನೆಯಲ್ಲಿ ನೆಹರೂ ಮತ್ತು ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ಉತ್ತಮ ಸಂವಿಧಾನ ದೊರೆತಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಮಾತನಾಡಿ, ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬ ಪ್ರಜೆಯು ನಡೆದುಕೊಳ್ಳಬೇಕು. ಸಮಾನತೆ, ಸ್ವಾತಂತ್ರ್ಯ, ಶಿಕ್ಷಣ ಮತ್ತಿತರ ಮೂಲಭೂತ ಹಕ್ಕುಗಳನ್ನು ನೀಡುವದರ ಜೊತೆ ಕರ್ತವ್ಯಗಳನ್ನು ಸಹ ಹೇಳಲಾಗಿದೆ. ಅದರಂತೆ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರದಲ್ಲಿ ಹಲವು ಧರ್ಮ, ಜಾತಿ, ಮತಗಳನ್ನು ಹೊಂದಿದ್ದು, ಪ್ರತಿಯೊಬ್ಬರೂ ಸಾಮರಸ್ಯ ಹಾಗೂ ಸಮಾನತೆಯಿಂದ ಬದುಕುವಂತಾಗಬೇಕು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದ್ದು, ಅದರಂತೆ ನಡೆದುಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಎಂ. ಕಾರ್ಯಪ್ಪ ಅವರು ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಬಗ್ಗೆ ಮತ್ತು ಪೊಲೀಸ್ ದೂರು ಪ್ರಾಧಿಕಾರದ ಬಗ್ಗೆ ಉಪನ್ಯಾಸ ನೀಡಿದರು.

ಅಪರ ಸಿವಿಲ್ ನ್ಯಾಯಾಧೀಶ ಬಿ.ಎನ್. ರಮೇಶ್ ಬಾಬು, ಸರ್ಕಾರಿ ಅಭಿಯೋಜಕ ಫಿರೋಜ್ ಖಾನ್, ವಕೀಲರ ಸಂಘದ ಉಪಾಧ್ಯಕ್ಷ ಕೆ.ಡಿ. ದಯಾನಂದ, ಸಹಾಯಕ ಅಭಿಯೋಜಕ ರಾಜು ಮತ್ತಿತರರು ಇದ್ದರು.

ಕಾರ್ಯಕ್ರಮಕ್ಕೂ ಮೊದಲು ಭಾರತದ ಸಂವಿಧಾನ ಪ್ರಸ್ತಾವನೆಯನ್ನು ವಕೀಲ ರತನ್ ತಮ್ಮಯ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಪ್ರೀತಂ ಸ್ವಾಗತಿಸಿದರು. ದಯಾ ಹೆಚ್. ಬಂಗೇರಾ ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ನಿರೂಪಿಸಿ, ವಂದಿಸಿದರು.