ಕುಶಾಲನಗರ, ಆ. 9: ಕುಶಾಲನಗರ ಸಮೀಪದ ನಂಜರಾಯಪಟ್ಟಣ ಗ್ರಾಮದಲ್ಲಿ ತೆರೆಯಲಾಗಿರುವ ಮದ್ಯದಂಗಡಿ ಮುಚ್ಚುವಂತೆ ವಿವಿಧ ಸಂಘಸಂಸ್ಥೆಗಳಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ನಡೆಸಿದ ನಂಜುಂಡೇಶ್ವರ ಯುವಕ ಸಂಘದ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ ಕಾರ್ಯಕರ್ತರು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಅಂಗಡಿಯನ್ನು ಮುಚ್ಚಿಸಲು ಕ್ರಮಕೈಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಕಳೆದ ಹಲವು ವರ್ಷಗಳಿಂದ ಸ್ಥಳೀಯರು ಹಾಗೂ ಸಂಘಸಂಸ್ಥೆಗಳು ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು. ಮದ್ಯದಂಗಡಿ ಮುಚ್ಚಲು ಕ್ರಮಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟ ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಕ್ರಮಕೈಗೊಂಡಿದೆ.

ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ, ಸ್ಥಳೀಯ ಮಹಿಳಾ ಸಂಘಟನೆಗಳು, ಗ್ರಾಮಸ್ಥರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಂಜುಂಡೇಶ್ವರ ಯುವಕ ಸಂಘದ ಅಧ್ಯಕ್ಷ ಸಿ.ಎಲ್. ವಿಶ್ವ, ಕರವೇ (ಪ್ರವೀಣ್ ಶೆಟ್ಟಿ ಬಣ)ದ ಜಿಲ್ಲಾಧ್ಯಕ್ಷ ಪಿ.ಕೆ. ಜಗದೀಶ್, ಎಸ್‍ಡಿಎಂಸಿ ಅಧ್ಯಕ್ಷ ರಮೇಶ್, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ. ಚಂದ್ರು, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಬಿ. ರಾಜು, ಮಹಿಳಾ ಸಂಘಟನೆಗಳ ಮುಖಂಡರಾದ ಚಿತ್ರಾರಮೇಶ್, ಕೌಸಲ್ಯ, ಶೈಲಜಾ, ವನಜಾ, ರಾಧಾಮಣಿ ಮತ್ತಿತರರು ಇದ್ದರು.