ಮಡಿಕೇರಿ, ಜು. 20: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಜಿಲ್ಲಾ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹದಿನಾಲ್ಕು ವರ್ಷದ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಬಳಸಿಕೊಳ್ಳುವದು ಅಥವಾ ನೇಮಕ ಮಾಡಿಕೊಳ್ಳುವದು ಅಪರಾಧವಾಗಿದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಬಾಲಕಾರ್ಮಿಕ ಕಾಯ್ದೆ 1986 ರ ಕಲಂ 17 ರಡಿ ನಿರೀಕ್ಷಕರಾಗಿ ನೇಮಕಗೊಂಡ ವಿವಿಧ ಇಲಾಖಾ ಅಧಿಕಾರಿಗಳು ಜಂಟಿ ತಂಡವು ಅನಿರೀಕ್ಷಿತ ದಾಳಿ ನಡೆಸಿ ಬಾಲಕಾರ್ಮಿಕ ಪ್ರಕರಣಗಳನ್ನು ದಾಖಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು.

ಜಿಲ್ಲೆಯಲ್ಲಿ ಕಟ್ಟಡ ಅಥವಾ ತೋಟದ ಕಾರ್ಮಿಕರಾಗಿ ದುಡಿಯುತ್ತಿರುವ ಬಾಲ ಕಾರ್ಮಿಕರು ಕಂಡುಬಂದÀಲ್ಲಿ ಕೂಡಲೇ ಸರ್ವೆ ಕಾರ್ಯವನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ವಿವಿಧ ಕೆಲಸಗಳಿಗೆ ವಾಹನಗಳಲ್ಲಿ ಬಾಲ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಬಗ್ಗೆ ನಿಗಾವಹಿಸಿ ಕೂಡಲೇ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳುವಂತಾಗಬೇಕು ಎಂದರು.

14 ವರ್ಷದೊಳಗಿನ ಮಕ್ಕಳನ್ನು ಹೊಟೇಲ್‍ಗಳಲ್ಲಿ, ಬಾರ್ ಎಂಡ್ ರೆಸ್ಟೋರೆಂಟ್‍ಗಳಲ್ಲಿ, ಕಟ್ಟಡ ನಿರ್ಮಾಣದಲ್ಲಿ, ತೋಟಗಳಲ್ಲಿ ಮತ್ತು ಇತರ ಕಡೆ ದುಡಿಸಿಕೊಳ್ಳುವದು ಕಂಡುಬಂದರೆ ಅಂತಹವರ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು. ಈ ಸಂಬಂಧ ಇಲಾಖೆ ಅಧಿಕಾರಿಗಳು ಕಾರ್ಯಯೋಜನೆ ರೂಪಿಸಿ ಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ ಅತೀ ಕಡಿಮೆ ಸಂಬಳಕ್ಕೆ 14 ವರ್ಷದ ಮಕ್ಕಳನ್ನು ದುಡಿಸಿಕೊಳ್ಳುವ ಪದ್ದತಿ ಕಂಡುಬಂದರೆ ಅಂತವರ ವಿರುದ್ಧ ಕಾನೂನು ಕ್ರಮವಾಗಬೇಕು. ಇಂತಹ ಪ್ರಕರಣಗಳನ್ನು ಇಲಾಖೆ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಕ್ಕಳ ಸಹಾಯವಾಣಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ತಿಳಿಸುವಂತಾಗಬೇಕು ಎಂದರು.

ಬಾಲ ಕಾರ್ಮಿಕರನ್ನು ಪತ್ತೆಹಚ್ಚುವದರ ಜೊತೆಗೆ ಜೀತ ಪದ್ಧತಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸುವ ಕ್ರಮ ಆಗಬೇಕು. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಸಂಘ ಸಂಸ್ಥೆಗಳು ನೆರವಾಗುವದು ಅಗತ್ಯವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಕಾರ್ಮಿಕ ಅಧಿಕಾರಿ ಮಹದೇವಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ.ಆರ್. ಶ್ರಿರಂಗಪ್ಪ, ಜಿಲ್ಲಾ ಸರ್ಜನ್ ಡಾ. ಮುತ್ತಪ್ಪ, ಹಿರಿಯ ಕಾರ್ಮಿಕ ನಿರೀಕ್ಷಕÀ ಯತ್ನಿಟ್ಟ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧಿಕಾರಿ ಮಮ್ತಾಜ್, ಓ.ಡಿ.ಪಿ. ಸಂಸ್ಥೆಯ ಜಾಯ್ಸ್ ಮೆನೆಜಸ್ ಮತ್ತಿತರರು ಇದ್ದರು.