ಸೋಮವಾರಪೇಟೆ, ಆ. 28: ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯವಾಗ ಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮ ಗೋಪಾಲ್ ಹೇಳಿದರು.

ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಇಲ್ಲಿಗೆ ಸಮೀಪದ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಜೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಸುಪ್ತವಾಗಿ ಇರುತ್ತದೆ. ಇದನ್ನು ಗುರುತಿಸ ಬೇಕಾದುದು ನಮ್ಮ ಕರ್ತವ್ಯವಾಗ ಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಿಕ್ಷಕರ ಸಂಘದ ರಾಜ್ಯ ಸಮಿತಿ ಸದಸ್ಯ ಯೋಗೇಶ್ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲು ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ತಾಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಮಾತ್ರ ನೀಡುತ್ತಾರೆ. ಕಾರ್ಯಕ್ರಮದ ಖರ್ಚು ವೆಚ್ಚವನ್ನು ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರೇ ಭರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಸ್ಥಾಯಿ ಸಮಿತಿ ಸಹಕಾರವನ್ನು ನೀಡಬೇಕೆಂದು ಮನವಿ ಮಾಡಿದರು. ತಾಲೂಕು ಶಿಕ್ಷಕರ ಸಂಘದ ಪ್ರಧಾನ ಕಾರ್ಯ ದರ್ಶಿ ಬಸವರಾಜ್ ಮಾತನಾಡಿ, ಇಡೀ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ಜಾರಿಯಾದರೆ ಮಾತ್ರ ಶಿಕ್ಷಣ ಕ್ಷೇತ್ರದ ಬೆಳವಣಿಗೆ ಸಾಧ್ಯ ಎಂದರು. ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದ ಹಲವಾರು ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೆಚ್ಚಿನ ಗಮನಹರಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪೊನ್ನಪ್ಪ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಸಬಿತ ಚನ್ನಕೇಶವ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪಿ. ರಾಯ್, ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ಕೆ.ಪಿ. ದಿನೇಶ್, ಮಂಜುಳ, ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಉಮೇಶ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಸಿಆರ್‍ಪಿ ಅಶೋಕ್, ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.