ಮಡಿಕೇರಿ, ಸೆ. 21 : ಮಡಿಕೇರಿ ಜನೋತ್ಸವ ದಸರಾಗೆ ಜಿಲ್ಲಾಡಳಿತ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಮಡಿಕೇರಿ ದಸರಾ ಜನೋತ್ಸವ ಸಿದ್ಧ್ದತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಡಿಕೇರಿ ದಸರಾ ವೀಕ್ಷಣೆಗೆ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಜನರ ಸುರಕ್ಷತೆ, ಶಾಂತಿ ಸುವ್ಯವಸ್ಥೆ ಕಾಪಾಡುವದು, ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವದು, ದಶ ಮಂಟಪಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವದು, ಮಡಿಕೇರಿ ನಗರದ ಎಲ್ಲಾ ಭಾಗಗಳಲ್ಲಿ ಬೀದಿ ದೀಪ ಅಳವಡಿಸುವದು, ರಸ್ತೆಯ ಗುಂಡಿ ಮುಚ್ಚುವದು, ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸುವದು, ದಶ ಮಂಟಪ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವದು, ಹೀಗೆ ನಾನಾ ಕಾರ್ಯಗಳು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.
ಮಡಿಕೇರಿ ಜನೋತ್ಸವ ದಸರಾದ ದಶ ಮಂಟಪದ ಮೆರವಣಿಗೆ ರಾತ್ರಿ ವೇಳೆಯಲ್ಲಿ ನಡೆಯುವದರಿಂದ ಮೈಸೂರಿನ ದಸರಾ ಮುಗಿಸಿಕೊಂಡು ಮಡಿಕೇರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿನದ್ದಾಗಿರುತ್ತದೆ. ಆದ್ದರಿಂದ ಜನರ ಸುರಕ್ಷತೆ, ವಾಹನಗಳ ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳುವದು, ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳ ಗುರುತಿಸುವದು ಮತ್ತಿತರ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ ಮಡಿಕೇರಿ ದಸರಾ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು, ಮಡಿಕೇರಿ ದಸರಾವನ್ನು ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲಾಗುವದು. ಸುಗಮ ವಾಹನ ಸಂಚಾರ ಕಲ್ಪಿಸುವದು, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವದು ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಅವರು ತಿಳಿಸಿದರು.
ಮಡಿಕೇರಿ ದಸರಾ ಸಂದರ್ಭದಲ್ಲಿ ದಸರಾ ಸಮಿತಿ ಪದಾಧಿಕಾರಿಗಳು ಪೊಲೀಸರೊಂದಿಗೆ ಕೈಜೋಡಿಸಬೇಕು. ದಸರಾ ಸಮಿತಿಯ ಸ್ವಯಂ ಸೇವಕರನ್ನು ಪೊಲೀಸರೊಂದಿಗೆ ನಿಯೋಜಿಸಿದರೆ ಒಳ್ಳೆಯದು ಎಂದು ಸಲಹೆ ಮಾಡಿದರು.
ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ಸಿ. ದೇವಯ್ಯ ಅವರು ಮಾತನಾಡಿ ಮಡಿಕೇರಿ ದಸರಾವನ್ನು ಜನೋತ್ಸವ ದಸರವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಿದೆ. ಆ ನಿಟ್ಟಿನಲ್ಲಿ ಈ ಹಿಂದೆ ತರಲಾಗಿರುವ ಬೈಲಾದಂತೆ ದಸರಾ ಆಚರಣೆಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಮಡಿಕೇರಿ ದಸರಾ ಜನೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ
(ಮೊದಲ ಪುಟದಿಂದ) ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಹೇಳಿದರು.
ಸಮಿತಿ ಸದಸ್ಯ ಜಿ.ಚಿದ್ವಿಲಾಸ್ ಮಾತನಾಡಿ ಪ್ರಸಕ್ತ ಸಂದರ್ಭದಲ್ಲಿ ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಸಮಸ್ಯೆ ಉಲ್ಬಣವಾಗಿದ್ದು, ಮಡಿಕೇರಿ ದಸರಾಗೆ ಸರ್ಕಾರದಿಂದ ಎಷ್ಟು ಹಣ ಬಿಡುಗಡೆಯಾಗುತ್ತದೆ ಎಂಬ ಬಗ್ಗೆ ಈಗಲೇ ಹೇಳಲು ಅಸಾಧ್ಯ. ಈ ಹಿಂದೆ ಆರು ದಿನಗಳ ಕಾಲ ಕಾವೇರಿ ಕಲಾಕ್ಷೇತ್ರದಲ್ಲಿ ಮತ್ತು ಮೂರು ದಿನಗಳ ಕಾಲ ಗಾಂಧಿ ಮೈದಾನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಕಾರ್ಯಕ್ರಮ ಆಯೋಜಿಸಿದರೆ ಒಳಿತಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ದಸರಾ ಸಂದರ್ಭದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುವಂತಾಗಲು ನಗರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿರ ಮಾತನಾಡಿ ಸರ್ಕಾರ ಮಡಿಕೇರಿ ದಸರಾಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಒಂಬತ್ತು ದಿನಗಳ ಕಾಲ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಸಿದ್ಧತೆಗಳು ನಡೆದಿವೆ. ಮಡಿಕೇರಿ ದಸರಾ ವಿಜೃಂಭಣೆಯಿಂದ ಆಚರಿಸುವಂತಾಗಲು ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಸಹಕಾರ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ದಸರಾ ಸಮಿತಿಯ ಪವನ್ ಪೆಮ್ಮಯ್ಯ ಮಡಿಕೇರಿ ನಗರದಲ್ಲಿ ದಶ ಮಂಟಪ ಸಾಗುವ ರಸ್ತೆಯ ಗುಂಡಿ ಮುಚ್ಚುವ ಕೆಲಸ ವಾಗಬೇಕಿದೆ. ಇಂದಿರಾಗಾಂಧಿ ವೃತ್ತ, ಕೊಡವ ಸಮಾಜದ ಕಟ್ಟಡ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಬೇಕಿದೆ ಎಂದು ಮನವಿ ಮಾಡಿದರು.
ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಎಚ್.ಟಿ. ಅನಿಲ್ ಅವರು ದಸರಾ ಹಿನ್ನೆಲೆ ಸಾಂಸ್ಕøತಿಕ ಸಮಿತಿ ವತಿಯಿಂದ ಅಕ್ಟೋಬರ್ 3 ರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಮಹಿಳಾ ದಸರಾ, ಮಕ್ಕಳ ದಸರಾವನ್ನು ವಿಶೇಷವಾಗಿ ಆಯೋಜಿಸಲಾಗುತ್ತಿದೆ. ಮಕ್ಕಳ ದಸರಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಲು ಅವಕಾಶ ಮಾಡುವಂತೆ ಜಿಲ್ಲಾಧಿಕಾರಿಯವರಲ್ಲಿ ಕೋರಿದರು.
ಮಹಿಳಾ ದಸರಾದಲ್ಲಿ ಸ್ತ್ರೀಶಕ್ತಿ ಸಂಘಗಳು, ಮಹಿಳಾ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ದಿನದ 24 ಗಂಟೆಯು ವೈದ್ಯರ ಸೇವೆ ಲಭ್ಯವಾಗಬೇಕು. ಅಗ್ನಿಶಾಮಕ ವಾಹನ ಇರಬೇಕು. ವಿದ್ಯುತ್ ವ್ಯತ್ಯಯ ಉಂಟಾಗಬಾರದು. ಹಾಗೆಯೇ ತುರ್ತು ಮಾಹಿತಿಗಾಗಿ ಪೊಲೀಸ್ ಇಲಾಖೆಯಿಂದ ದೂರವಾಣಿ ಸಂಪರ್ಕ ಒದಗಿಸಬೇಕು ಎಂದು ಮನವಿ ಮಾಡಿದರು.
ಬೈ.ಶ್ರೀ ಪ್ರಕಾಶ್ ಮಾತನಾಡಿ ಜನದಟ್ಟಣೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಖಜಾಂಚಿ ಅನಿತಾ ಪೂವಯ್ಯ ಅವರು ಗಾಂಧಿ ಮೈದಾನ ಬಳಿ ಅಂಬ್ಯುಲೆನ್ಸ್ ಸೌಲಭ್ಯ ಸದಾ ಲಭ್ಯವಿರಬೇಕು ಎಂದು ಕೋರಿದರು.
ದಸರಾ ಸಮಿತಿ ಉಪಾಧ್ಯಕ್ಷ ಪಿ.ಎಂ. ರವಿ, ನಗರಸಭೆ ಉಪಾಧ್ಯಕ್ಷ ಪ್ರಕಾಶ್, ನಗರಸಭಾ ಸದಸ್ಯರಾದ ಉದಯ್ ಕುಮಾರ್, ಪೀಟರ್ ಇತರರು ಮಡಿಕೇರಿ ದಸರಾ ವ್ಯವಸ್ಥಿತ ಆಚರಣೆ ಸಂಬಂಧ ಹಲವು ಸಲಹೆ ನೀಡಿದರು.
ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಅಡಚಣೆ ಉಂಟಾಗದಂತೆ ನೋಡಿಕೊಳ್ಳುವದರ ಜೊತೆಗೆ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವದು ಅತ್ಯಗತ್ಯವಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಯಿತು.
ವಾಹನ ನಿಲುಗಡೆ ಪ್ರದೇಶದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡುವದು, ನಗರ ಪ್ರದೇಶದಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸುವದು ಮತ್ತಿತರ ಸಂಬಂಧ ಚರ್ಚೆ ನಡೆಯಿತು. ಪೊಲೀಸ್ ಇನ್ಸ್ಪೆಕ್ಟರ್ ಭರತ್ ಅವರು ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿ ಬಸ್ಗಳು ಸಾಲುಗಟ್ಟಿ ನಿಲ್ಲುತ್ತದೆ. ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಮನವಿ ಮಾಡಿದರು.
ದಶ ಮಂಟಪಗಳ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯನ್ನು ಸದ್ಯದಲ್ಲೇ ಆಹ್ವಾನಿಸಲಾಗುವದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ ಇತರರು ಇದ್ದರು.