ಬೆಂಗಳೂರು, ಜು. 27 : ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಉತ್ತರ ಕರ್ನಾಟಕ ಭಾಗದ ಸಂಸದರ ಕಚೇರಿಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ 7.65 ಟಿಎಂಸಿ ನೀರು ಬಳಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧೀಕರಣ ಪೀಠ ಇಂದು ತಿರಸ್ಕರಿಸಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು ಬೆಳಗಾವಿ, ಹುಬ್ಬಳ್ಳಿ, ನರಗುಂದ, ಬೆಟಗೇರಿಯಲ್ಲಿ ರೈತರು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳು ನಿಷೇಧಾಜ್ಞೆಯ ನಡುವೆಯೂ ಟಯರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿವೆ. ರಾಜ್ಯಕ್ಕೆ ಅನ್ಯಾಯವಾಗಿರುವದನ್ನು ಖಂಡಿಸಿ ಗುರುವಾರ ಉತ್ತರ ಕರ್ನಾಟಕ ಬಂದ್‍ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ. ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತ ಸಂಘಟನೆ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿವೆ.

ಮಹದಾಯಿ ತೀರ್ಪು ವಿರೋಧಿಸಿ ಪ್ರತಿಭಟನೆ