ಮೂರ್ನಾಡು, ಅ. 31 : ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅತ್ಯಧಿಕ ಕ್ಷೇತ್ರದಲ್ಲಿ ಜಯಗಳಿಸಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಡಿಕೇರಿ ವಿಧಾನ ಸಭಾ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ ಬಿಜೆಪಿಯ ಮೂರ್ನಾಡು ಪಂಚಾಯಿತಿ ವ್ಯಾಪ್ತಿಯ ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಸಮಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಒಂದಿಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಇಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು.

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಸಮಿತಿ ಉಪಾಧ್ಯಕ್ಷ ಬೆಲ್ಲು ಸೋಮಯ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದಕ್ಕೆ ಗ್ರಾಮಗಳ ರಸ್ತೆಗಳೇ ಸಾಕ್ಷಿ ಆಗಿದೆ. ಗ್ರಾಮೀಣ ಭಾಗದಲ್ಲಿ ರಸ್ತೆಗಳು ತೀರಾ ಹದಗೆಟ್ಟಿದ್ದು, ಗುಂಡಿ ಮುಚ್ಚುವ ಕಾರ್ಯ ಕೂಡ ನಡೆದಿಲ್ಲ. ಮುಂಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನ ಬಲ ಪ್ರದರ್ಶಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕು ಎಂದರು.

ಮೂರ್ನಾಡು ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷ ಕೊಂಪುಳೀರ ಗಣೇಶ್ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಶಶಿ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನಾ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ಪವಿತ್ರ, ಮೂರ್ನಾಡು ಹೋಬಳಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜು ತಿಮ್ಮಯ್ಯ, ಎಸ್‍ಟಿ, ಎಸ್‍ಇ ಮೋರ್ಚಾ ಹೋಬಳಿ ಅಧ್ಯಕ್ಷ ರವಿ, ಯುವ ಮೋರ್ಚಾ ಹೋಬಳಿ ಅಧ್ಯಕ್ಷ ಕುಶನ್, ಮೂರ್ನಾಡು ಪಂಚಾಯಿತಿ ಸಮಿತಿ ಉಪಾಧ್ಯಕ್ಷ ಪೋತಂಡ ಗಣಪತಿ, ಕಾರ್ಯದರ್ಶಿ ಮಧುಕುಮಾರ್, ತೆಕ್ಕಡೆ ರಮೇಶ್ ಇತರರು ಹಾಜರಿದ್ದರು.