ಮಡಿಕೇರಿ, ಅ. 22: ಬೆಂಗಳೂರಿನಲ್ಲಿ ನಡೆದ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಸರಕಾರ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಕಳೆದೆರಡು ವರ್ಷಗಳಲ್ಲಿ 14 ಮಂದಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆದಿದೆ. ಹೀಗಿದ್ದರೂ ರಾಜ್ಯ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದೆ. ರಾಜ್ಯ ಸರಕಾರ ಹಿಂದೂ ಸಮಾಜದ ನೆಮ್ಮದಿ ಕೆಡಿಸುವ ಹುನ್ನಾರ ಮಾಡುತ್ತಿದ್ದು, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇನ್ನಾದರೂ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕು. ರುದ್ರೇಶ್ ಹತ್ಯೆ ಪ್ರಕರಣ ಸೇರಿದಂತೆ ಇದುವರೆಗೂ ನಡೆದಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರ ಹತ್ಯೆ ಪ್ರಕರಣಗಳು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ಮನುಮುತ್ತಪ್ಪ, ನಗರಾಧ್ಯಕ್ಷ ಮಹೇಶ್ ಜೈನಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನಾ, ಮಾಜಿ ಅಧ್ಯಕ್ಷೆ ಕಾಂತಿ ಸತೀಶ್, ಜಿ.ಪಂ. ಸದಸ್ಯರಾದ ಮುರಳಿ ಕರುಂಬಮಯ್ಯ, ಕಿರಣ್ ಕಾರ್ಯಪ್ಪ, ನಗರಸಭಾ ಸದಸ್ಯರುಗಳಾದ ಪಿ.ಡಿ. ಪೊನ್ನಪ್ಪ, ಉಣ್ಣಿಕೃಷ್ಣ, ಅನಿತಾ ಪೂವಯ್ಯ, ಸವಿತಾ ರಾಕೇಶ್, ಮಾಜಿ ಸದಸ್ಯರುಗಳಾದ ಬಿ.ಕೆ. ಅರುಣ್ ಕುಮಾರ್, ಉಮೇಶ್ ಸುಬ್ರಮಣಿ, ಟೌನ್ ಬ್ಯಾಂಕ್ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ಸತೀಶ್, ಮಡಿಕೇರಿ ತಾಲೂಕು ಬಿಜೆಪಿ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಹಾಗೂ ಮತ್ತಿತರರು ಇದ್ದರು. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.