ಸೋಮವಾರಪೇಟೆ, ಜ. 5: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪಾಲನೆಗೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದು ಜಿ.ಪಂ. ಮಾಜೀ ಅಧ್ಯಕ್ಷ ವಿ.ಎಂ. ವಿಜಯ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಮೀಪದ ಮಸಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಕರು-ಪೋಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಮನ್ವಯತೆ ಇದ್ದರೆ ಮಾತ್ರ ಶಾಲೆಯ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಅವರು ಅಭಿಪ್ರಾಯಿಸಿದರು.
ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ವಿ. ನಾಗರಾಜು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮ ಗೋಪಾಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಉಷಾ ರವೀಂದ್ರ, ಗ್ರಾಮದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ದಿವಾಕರ್, ಸದಸ್ಯರಾದ ಬೋಪಯ್ಯ, ಪುರಂದರ, ಶಾಲಾ ಮುಖ್ಯ ಶಿಕ್ಷಕ ಟಿ.ಡಿ. ನರೇಂದ್ರನಾಥ್ ಉಪಸ್ಥಿತರಿದ್ದರು.
ಇದೇ ಸಂದರ್ಭ ಶಿಕ್ಷಕರಾದ ಎಚ್.ಬಿ. ಸರಸ್ವತಿ ಹಾಗೂ ನೇರುಗಳಲೆ ಪ್ರೌಢಶಾಲೆಯ ಶಿಕ್ಷಕ ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು. ಶಾಲಾ ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ, ಹಳೆಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.