ಮಡಿಕೇರಿ, ಅ. 22: ಜಿಲ್ಲಾಡಳಿತ ವತಿಯಿಂದ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಕೈಜೋಡಿಸಿ ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡಿನ ಹಬ್ಬವಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳಬೇಕು. ಜೊತೆಗೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ನಿರ್ದೇಶನ ನೀಡಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವಂತಾಗಬೇಕು. ಬೆಳಗಿನ ಹಾಗೂ ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬೇಕು. ಅದೇ ರೀತಿ ಸ್ತಬ್ಧ ಚಿತ್ರಗಳನ್ನು ಸಹ ವಿಷಯಾಧಾರಿತವಾಗಿ ಆಕರ್ಷಣೀಯವಾಗಿ ನಿರ್ಮಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1 ರಂದು ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿ ವಾಣಿಜ್ಯ ಸಂಕೀರ್ಣಗಳಲ್ಲಿ ಅಲಂಕಾರ ಮಾಡಿ ಕನ್ನಡ ಧ್ವಜ ಹಾರಿಸಿ ನಾಡಹಬ್ಬಕ್ಕೆ ಮೆರಗು ತರುವಂತಾಗಬೇಕು. ಅದೇ ರೀತಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಿಂಡಿ, ಲಘು ಉಪಾಹಾರ ಜವಾಬ್ದಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೇಲುಸ್ತುವಾರಿ ಆಹಾರ ಸಮಿತಿಗೆ ವಹಿಸಲಾಯಿತು. ಒಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಐತಿಹಾಸಿಕ ಸಂದೇಶವನ್ನು ಒಳಗೊಂಡ ಸ್ತಬ್ಧ ಚಿತ್ರಗಳನ್ನು ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ರಾಜ್ಯೋತ್ಸವ ಸಂದರ್ಭದಲ್ಲಿ ಕುಡಿಯುವ ನೀರು ಸೌಲಭ್ಯ ಕಲ್ಪಿಸುವದರ ಜತೆಗೆ, ಸ್ವಚ್ಛತೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ತಿಳಿಸಲಾಯಿತು.
ಉಪ ಪೊಲೀಸ್ ವರಿಷ್ಠಾಧಿಕಾರಿ ಛಬ್ಬಿ, ಜಿ.ಪಂ. ಉಪ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಸಿ. ನಾಗರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್, ಜಿ.ಪಂ. ಇಂಜಿನಿಯರ್ ಶಶಿಧರ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕೆ.ವಿ. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾಗರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ನಾಯಕ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ದರ್ಶನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಳ್ಳಯ್ಯ, ಮಣಜೂರು ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಣ್ಣ, ತಹಶೀಲ್ದಾರ್ ಕುಸುಮ, ಜಿಲ್ಲಾ ಸಶಸ್ತ್ರ ಪಡೆಯ ನಿರೀಕ್ಷಕ ತಿಮ್ಮಪ್ಪಗೌಡ, ಜಿಲ್ಲಾ ಕೇಂದ್ರ ಗ್ರಂಥಾಲಯ ಜಿಲ್ಲಾಧಿಕಾರಿ ಲೀಲಾವತಿ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್ ಪ್ರವೀಣ್ ಕುಮಾರ್, ಅನಿಲ್ ಕುಮಾರ್ ಇತರರು ಹಲವು ಮಾಹಿತಿ ನೀಡಿದರು.