ಮಡಿಕೇರಿ, ಜು. 16: ವಿಶೇಷ ಅಗತ್ಯತೆಯುಳ್ಳ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 1 ರಿಂದ ಮೂರು ದಿನಗಳ ಕಾಲ ಆಯೋಜಿಸಲು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 1 ರಂದು ಸೋಮವಾರಪೇಟೆ, ಆ. 2 ರಂದು ವೀರಾಜಪೇಟೆ ಮತ್ತು ಆ. 3 ರಂದು ಮಡಿಕೇರಿಯಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲು ನಿರ್ಧರಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್. ಬಸವರಾಜು ಅವರು ಆರೋಗ್ಯ ಇಲಾಖೆಯ ಸಹಕಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗಾಗಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ತಜ್ಞ ವೈದ್ಯರನ್ನು ನಿಯೋಜಿಸಿ ಶಿಬಿರದ ಯಶಸ್ವಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು. ಪ್ರಸಕ್ತ ವರ್ಷದಲ್ಲಿ ಮೂರು ತಾಲೂಕಿನಿಂದ ಸುಮಾರು 770 ಮಕ್ಕಳನ್ನು ವಿಶೇಷ ಅಗತ್ಯತೆಯುಳ್ಳ ಮಕ್ಕಳೆಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ, ಜಿಲ್ಲಾ ಸರ್ಜನ್ ಡಾ. ಮುತ್ತಪ್ಪ, ತಾಲೂಕು ವೈದ್ಯಾಧಿಕಾರಿಗಳಾದ ಡಾ. ರವಿಕುಮಾರ್, ಡಾ. ಸುಪರ್ಣ, ಭಾಗ್ಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಧರನ್, ಮಲ್ಲೇಸ್ವಾಮಿ, ಪಾಂಡು, ಬಿಆರ್‍ಸಿಗಳಾದ ಎಸ್.ಪಿ. ಮಹದೇವು, ಸುರೇಶ್, ಮಹದೇವ ಅವರು ತಜ್ಞ ವೈದ್ಯರ ನಿಯೋಜನೆ ಹಾಗೂ ಶಿಬಿರ ಏರ್ಪಡಿಸಲು ಹಲವು ಮಾಹಿತಿ ನೀಡಿದರು.