ಮಡಿಕೇರಿ, ಜು.30: ರಾಜ್ಯ ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಜಾರಿ ಗೊಳಿಸಿರುವ ಯೋಜನೆಗಳ ಕುರಿತು ಶ್ರೀಸಾಮಾನ್ಯರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ 10 ದಿನಗಳ ವರೆಗೆ ಆಯೋಜಿಸಿರುವ ಕಲಾಜಾಥಾ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಶನಿವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಸರ್ಕಾರ ಅನ್ನಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ವಿದ್ಯಾಸಿರಿ, ಮೈತ್ರಿ, ಮನಸ್ವಿನಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆ ದಿಸೆಯಲ್ಲಿ ಜನಸಾಮಾನ್ಯರಿಗೆ ಮಾಹಿತಿ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಜಾನಪದ ಗೀತೆ ಹಾಗೂ ಬೀದಿನಾಟಕಗಳ ಮೂಲಕ ಸಾಮಾನ್ಯ ಜನರಿಗೆ ಮಾಹಿತಿ ನೀಡಲು ವಿಶೇಷ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ವಿಶೇಷ ಪ್ರಚಾರಾಂದೋಲನ ವನ್ನು ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುವ ಸಂತೆ ದಿನಗಳಂದು ತೆರಳಿ ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ನೀಡಬೇಕು. ಜನದಟ್ಟಣೆ ಇರುವ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ವಿಶೆಷ ಪ್ರÀಚಾರಾಂದೋಲನದ ಕುರಿತು ವಿವರಣೆ ನೀಡಿದ ವಾರ್ತಾಧಿಕಾರಿ ಚಿನ್ನಸ್ವಾಮಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಬಗ್ಗೆ ವಿಶೇಷವಾಗಿ ಸಿದ್ದಪಡಿಸಿರುವ ವಾಹನವನ್ನು ಬಳಸಿಕೊಂಡು, ಬೀದಿ ನಾಟಕ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೊಡಗು ವಿದ್ಯಾ ಸಾಗರ ಕಲಾ ವೇದಿಕೆಯ ಇ.ರಾಜು ಮತ್ತು ತಂಡದವರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಜಾನಪದ ಹಾಡಿನ ಮೂಲಕ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್ ಮತ್ತಿತರರು ಇದ್ದರು.