ಶನಿವಾರಸಂತೆ, ಆ. 31: ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ಸುಪ್ತ ಪ್ರತಿಭೆಗೆ ಕನ್ನಡಿ ಹಿಡಿಯುವ ಕಾರ್ಯಕ್ರಮವಾಗಿದೆ ಎಂದು ವಿಘ್ನೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ಶನಿವಾರಸಂತೆ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ಮಾತನಾಡಿ, ಪ್ರತಿಭಾ ಕಾರಂಜಿ ಶಾಲೆಗಳ ಸಾಂಸ್ಕøತಿಕ ಹಬ್ಬವಾಗಿದೆ. ಮಗು ಓದು-ಬರಹದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದರು.

ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಅರಳಿಸಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದರು.

ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಗೌಸ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಗಿರೀಶ್, ಸಂಪನ್ಮೂಲ ವ್ಯಕ್ತಿ ನಿರ್ಮಲಾ, ಪ್ರಾಂಶುಪಾಲ ಶಿವಪ್ರಕಾಶ್, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಮಂಜುನಾಥ್ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಬಾನು ರಿಜ್ವಾನ್ ಮಾತನಾಡಿ, ಮಕ್ಕಳ ಆಸಕ್ತಿಯನ್ನು ಗುರುತಿಸಿ ಅವರ ಪ್ರತಿಭೆಯನ್ನು ಹೊರಹೊಮ್ಮಿಸುವ ಶಿಕ್ಷಕರ ಪರಿಶ್ರಮ ಅಪಾರವಾದುದು ಎಂದರು.

ಹಂಡ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮಧು ಕುಮಾರ್, ವಿದ್ಯಾಸಂಸ್ಥೆ ನಿರ್ದೇಶಕಿ ನಿತ್ಯಾ, ಉಪನ್ಯಾಸಕರು, ಎಸ್.ಡಿ. ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು.

ಉಪನ್ಯಾಸಕ ಕೆ.ಪಿ. ಜಯ ಕುಮಾರ್ ನಿರೂಪಿಸಿ, ನಿರ್ಮಲಾ ಸ್ವಾಗತಿಸಿದರೆ, ಉಪನ್ಯಾಸಕ ಮಹಮ್ಮದ್ ಜೈರ್ ವಂದಿಸಿದರು.