ಸೋಮವಾರಪೇಟೆ, ಜ. 17: ತಾಲೂಕಿನ ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 58ನೇ ವರ್ಷದ ವಾರ್ಷಿಕ ಮಹಾರಥೋತ್ಸವ ಹಾಗೂ ವೈಭವದ ಜಾತ್ರೋತ್ಸವಕ್ಕೆ ಇಂದು ವಿಧ್ಯುಕ್ತ ತೆರೆಬಿದ್ದಿತು. ಕಳೆದ ತಾ. 13 ರಂದು ಪ್ರಾರ್ಥನಾ ಪೂಜೆಯೊಂದಿಗೆ ವಿಧ್ಯುಕ್ತವಾಗಿ ಚಾಲನೆಗೊಂಡಿದ್ದ ಪ್ರಸಕ್ತ ವರ್ಷದ ಜಾತ್ರೆಗೆ ದೇವಾಲಯ ಆಡಳಿತ ಮಂಡಳಿ ಪ್ರಮುಖರು ಹಾಗೂ ನೂರಾರು ಮಂದಿ ಗ್ರಾಮಸ್ಥರ ಸಮ್ಮುಖದಲ್ಲಿ ಇಂದು ಹಲವು ಪೂಜಾ ವಿಧಿವಿಧಾನಗಳು ನೆರವೇರುವ ಮೂಲಕ ತೆರೆಬಿದ್ದಿತು. 5 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು.

ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.

ಜಾತ್ರೆಯ ಕೊನೆಯ ದಿನದಂದು ದೇವಾಲಯದಲ್ಲಿ ಮಹಾ ಸಂಪ್ರೋಕ್ಷಣೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾ ಮಂಗಳಾರತಿ ನಂತರ ಮಂಗಳ ಪ್ರಾರ್ಥನೆ ನಡೆಯುವ ಮೂಲಕ ಪ್ರಸಕ್ತ ವರ್ಷದ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿತು.

ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ಹಾಗೂ ಶಾಂತಳ್ಳಿಯ ಬಿ.ಎ. ಗಣೇಶ್, ರಮೇಶ್ ಹೆಗ್ಡೆ, ಯಡೂರು ಸರ್ವೇಶ್, ಕುಮಾರ್, ಹಾನಗಲ್ಲು ಪ್ರಸಾದ್ ಅವರುಗಳ ನೇತೃತ್ವದ ತಂಡದವರಿಂದ ದೇವಾಲಯದಲ್ಲಿ ಪೂಜಾ ವಿಧಿ ವಿಧಾನಗಳು ನಡೆದವು. ನಿರಂತರವಾಗಿ ಅನಾದಿಕಾಲದಿಂದಲೂ ನಡೆದುಬಂದ ಪದ್ಧತಿಯ ಮೇರೆ ಕೂತಿ ನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ, ಹೊರ ಜಿಲ್ಲೆಯ ನೂರಾರು ಮಂದಿ ಭಕ್ತಾದಿಗಳು ಜಾತ್ರೆ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ರಘುಕುಮಾರ್, ಉಪಾಧ್ಯಕ್ಷ ಕೆ.ಟಿ. ಕೃಷ್ಣಪ್ಪ, ಕಾರ್ಯದರ್ಶಿ ಪರಮೇಶ್, ಖಜಾಂಚಿ ಲಿಂಗರಾಜು, ಸಹಕಾರ್ಯದರ್ಶಿ ದಿವ್ಯಕುಮಾರ್, ಪ್ರಮುಖರಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ನಿರಂಜನ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಜಾತ್ರೋತ್ಸವದ ಉಸ್ತುವಾರಿ ವಹಿಸಿದ್ದರು.