ಶ್ರೀಮಂಗಲ, ಡಿ. 15: ಶಿಕ್ಷಣ ಸಮಾಜಮುಖಿಯಾಗದಿದ್ದರೆ ಆ ಶಿಕ್ಷಣಕ್ಕೆ ಬೆಲೆ ಇಲ್ಲ. ಪ್ರತಿಯೊಬ್ಬರು ಸಂಪತ್ತು ಗಳಿಕೆಯ ಹಪಹಪಿಕೆಯಲ್ಲಿ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣ ಪಡೆಯುತ್ತಾರೆ. ಆದರೆ ಸಮಾಜಕ್ಕೆ ಒಳಿತಾಗುವ ಕೆಲಸ ಮಾಡುವದೇ ಬದುಕಿನ ಸರ್ವ ಶ್ರೇಷ್ಟ ಗುರಿ ಎಂಬದನ್ನು ಎಲ್ಲರೂ ಅರಿತು ಕೊಳ್ಳಬೇಕಿದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಿವಿಮಾತು ಹೇಳಿದರು. ಟಿ. ಶೆಟ್ಟಿಗೇರಿ ರೂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಈಗ ಸಾಕಷ್ಟು ಬದಲಾವಣೆ ಆಗಿದೆ. ಹಿಂದಿನ ಕಾಲದಲ್ಲಿ ಸಹಕಾರ, ಸೌಲಭ್ಯ ಹಾಗೂ ಪ್ರೋತ್ಸಾಹ ಕಡಿಮೆ ಇತ್ತು. ಆದರೆ ಇಂದು ಪೋಷಕರು ಮಕ್ಕಳಿಗೆ ಎಲ್ಲಾ ಸೌಕರ್ಯಗಳನ್ನು ನೀಡುವದರೊಂದಿಗೆ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಉದ್ಯೋಗ ಪಡೆಯುವ ನಿಮಿತ್ತ ಪೋಷಕರು ಮಕ್ಕಳಿಗೆ ಹೆಚ್ಚಿನ ಅಂಕ ಪಡೆಯಬೇಕೆಂದು ಒತ್ತಾಯ ಮಾಡುವದು, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಹೋಲಿಕೆ ಮಾಡುವದು ಮಾಡಬಾರದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೂಟ್ಸ್ ವಿದ್ಯಾಸಂಸ್ಥೆಯ ನಿರ್ದೇಶಕ ನಲ್ಲಂಗಡ ನಿರನ್ ಉತ್ತಪ್ಪ ಅವರು ವಿದ್ಯಾಸಂಸ್ಥೆಯ ಬೆಳವಣಿಗೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೂಟ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕೇಚೆಟ್ಟಿರ ಮಮತಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ತಿರ್‍ಕಚೇರಿರ ಗಣಪತಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚೆಟ್ಟಂಗಡ ಶಂಭು ಉಪಸ್ಥಿತರಿದ್ದರು. ಸಭಾ ಕಾರ್ಯ ಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಈ ಸಂದರ್ಭ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಹುಮಾನ ನೀಡಲಾಯಿತು.