ಸೋಮವಾರಪೇಟೆ,ಅ.31: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1ರಂದು (ಇಂದು) ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 61ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷರಾದ ಜಿ.ಎಸ್. ಕೃಷ್ಣ ಧ್ವಜಾರೋಹಣ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಮ್, ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಸಮಾರಂಭಕ್ಕೂ ಮುನ್ನ ಜೇಸಿ ವೇದಿಕೆ ಬಳಿಯಿಂದ ವಿವಿಧ ಶಾಲೆಗಳ ಸ್ಥಬ್ಧ ಚಿತ್ರದೊಂದಿಗೆ ಮೆರವಣಿಗೆಯ ಮೂಲಕ ಪ್ರಮುಖ ರಸ್ತೆಗಳಲ್ಲಿ ತೆರಳಲಾಗುವದು ಎಂದು ಪ್ರಕಟಣೆ ತಿಳಿಸಿದೆ.

ಕಸಾಪ ವತಿಯಿಂದ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 61ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಪರಿಷತ್ ಗೌರವ ಕಾರ್ಯದರ್ಶಿ ರಾಣಿ ರವೀಂದ್ರ ತಿಳಿಸಿದ್ದಾರೆ.

ಬೆಳಿಗ್ಗೆ 8-30ಕ್ಕೆ ಸಾಹಿತ್ಯ ಪರಿಷತ್ ಭವನದ ಎದುರು ಧ್ವಜಾರೋಹಣವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ ನೆರವೇರಿಸಲಿರುವರು. ಸಾಹಿತ್ಯ ಪರಿಷತ್‍ನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿರುವರು.