ಸೋಮವಾರಪೇಟೆ, ಜೂ. 18: ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಬಹಳಷ್ಟು ಹಿಂದೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಪರಿಶ್ರಮದೊಂದಿಗೆ ಮುಂದಿನ ದಿನಗಳಲ್ಲಿ ಐಎಎಸ್, ಐಪಿಎಸ್ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಸಲಹೆ ನೀಡಿದರು.

ನಗರದ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಡ್ಡದಾರಿ ಹಿಡಿಯದೆ ಸತತ ಪ್ರಯತ್ನ ನಡೆಸುವ ಮೂಲಕ ಯಶಸ್ಸು ಸಾಧಿಸುವತ್ತ ಗಮನಹರಿಸಬೇಕು. ಜನಾಂಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಎಲ್ಲಾ ಅನುಕೂಲತೆಗಳನ್ನು ಮಾಡಿಕೊಡುವದಾಗಿ ಈ ಸಂದರ್ಭ ಮಂಜುನಾಥ್ ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾ ಸಮಿತಿಯ ಅಧ್ಯಕ್ಷ ಬಿ.ಪಿ. ಬಸಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಂದೀಪನಿ ಶಾಲೆಯ ಮುಖ್ಯೋಪಾಧ್ಯಾಯ ಗುಂಡೇಗೌಡ, ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷ ಬಿ.ಎಸ್. ರಾಮಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಬಿ.ಎಸ್. ಸತ್ಯೇಂದ್ರ, ಎನ್.ಎನ್. ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಬಿ.ಆರ್. ಆದರ್ಶ್, ಬಿ.ಆರ್. ದಿಲೀಪ್ ಮತ್ತು ಎನ್.ಎಂ. ಪಲ್ಲವಿ ಅವರುಗಳನ್ನು ಸನ್ಮಾನಿಸಲಾಯಿತು.