ಕುಶಾಲನಗರ, ಸೆ. 6: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಜನತೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ವತಿಯಿಂದ ಹಾರಂಗಿ ಜಲಾಶಯದ ಮುಂಭಾಗ ಪ್ರತಿಭಟನೆ ನಡೆಯಿತು.

ಕಾವಲುಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಕಾವೇರಿ ವಿಚಾರದಲ್ಲಿ ಆಗಾಗ್ಯೆ ಕ್ಯಾತೆ ತೆಗೆಯುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಧಿಕ್ಕಾರ ಕೂಗಲಾಯಿತು. ಈ ಸಂದರ್ಭ ಹಾರಂಗಿ ಅಣೆಕಟ್ಟೆ ಆವರಣದಲ್ಲಿ ಪೊಲೀಸರು ಭಾರೀ ಭದ್ರತೆ ಕಲ್ಪಿಸುವದರೊಂದಿಗೆ ಜಲಾಶಯದ ಆವರಣಕ್ಕೆ ತೆರಳದಂತೆ ಸಂಪೂರ್ಣ ಬಂದೋಬಸ್ತ್ ಕಲ್ಪಿಸಿದ್ದರು.

ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೆಗೌಡ ನೇತೃತ್ವದಲ್ಲಿ ಗ್ರಾಮಾಂತರ ಠಾಣಾಧಿಕಾರಿ ಜೆ.ಇ. ಮಹೇಶ್ ಮತ್ತು ಸಿಬ್ಬಂದಿಗಳು ಬಂದೋಬಸ್ತ್ ಕಲ್ಪಿಸಿದ್ದರು.