ಮಡಿಕೇರಿ, ಆ. 17 : ವೀರಾಜಪೇಟೆ ತಾಲೂಕಿನ ಹುದಿಕೇರಿ ಮತ್ತು ಶ್ರೀಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸÀಚಿವರು ಜಿಲ್ಲೆಯ ಲ್ಲಿನ ಪ್ರಾಥಮಿಕ, ಸಮುದಾಯ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ವೈದ್ಯರನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜೊತೆ ಚರ್ಚಿಸಲಾಗಿದೆ. ತಾ. 26 ರಂದು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ ನಡೆಯಲಿದ್ದು, ಅಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಆಗಮಿಸಲಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಹೇಳಿದರು.
‘ಆರೋಗ್ಯವಂತ ಸಮುದಾಯ ಅಮೂಲ್ಯ ಸಂಪತ್ತಾಗಿದ್ದು, ಜನ ಸಮುದಾಯಕ್ಕೆ ಆರೋಗ್ಯ ಸಂಪತ್ತನ್ನು ಒದಗಿಸಲು ಸರ್ಕಾರ ಶಕ್ತಿ ಮೀರಿ ಶ್ರಮಿಸುತ್ತಿದೆ. ಆರೋಗ್ಯ ರಕ್ಷಣೆಯ ಕನಿಷ್ಟ ಸವಲತ್ತುಗಳು ಶ್ರೀಸಾಮಾನ್ಯರಿಗೂ ಸಿಗಬೇಕು ಎನ್ನುವದು ಸರ್ಕಾರದ ಆಶಯ ವಾಗಿದೆ. ಬಡವರಿಗೆ ಮತ್ತು ಕಡುಬಡವರಿಗೆ ಸರ್ಕಾರಿ ಆರೋಗ್ಯ ಸೇವಾ ಸಂಸ್ಥೆಗಳು ಮತ್ತು ಪರಿಷ್ಕøತ ವಿಮಾ ಯೋಜನೆಗಳ ಮೂಲಕ ಆರೋಗ್ಯ ಸವಲತ್ತುಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದೆ. ಸುಸಜ್ಜಿತ ಕಟ್ಟಡಗಳು ಜೊತೆಗೆ ಇತರ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬಡ ಜನರು ಆಗಮಿಸುತ್ತಾರೆ. ಅವರಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ ಮಾತನಾಡಿ ಜಿಲ್ಲೆಯಲ್ಲಿ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಆರೋಗ್ಯ ಸವಲತ್ತುಗಳನ್ನು ಕಲ್ಪಿಸಲು ತೊಂದರೆಯಾಗಿದೆ ಎಂದು ಹೇಳಿದರು. ಶುಶ್ರೂಷಕರ ತರಬೇತಿ ಪಡೆದವರನ್ನು ಎ.ಎನ್.ಎಂ.ನ್ನಾಗಿ ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಯತಿರಾಜು, ಸ್ಥಳೀಯ ಜನಪ್ರತಿನಿಧಿ ಗಳು ಮತ್ತಿತರರು ಇದ್ದರು.