ಮಡಿಕೇರಿ, ಜೂ. 9: ಮಡಿಕೇರಿ ಅರಣ್ಯ ವಲಯ ವತಿಯಿಂದ ನಗರಸಭೆ, ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ನೆಲ, ಜಲ, ಗಾಳಿ ಮಲೀನವಾಗದಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರಾ ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಚುಮ್ಮಿ ದೇವಯ್ಯ, ಮಡಿಕೇರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ. ರಂಗನಾಥ್, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ವನಪಾಲಕ ಜಗದೀಶ್, ಜಗನ್ನಾಥ್ ಹಾಗೂ ಸಿಬ್ಬಂದಿ ಹಾಜರಿದ್ದರು.