ಕುಶಾಲನಗರ, ಮಾ 10: ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಯೊಂದನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸಂಪತ್ ಕುಮಾರ್ ನೇತೃತ್ವದಲ್ಲಿ ಧಾಳಿ ನಡೆಸಿದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ.ಮಹೇಶ್ ಮತ್ತು ತಂಡ ಕಾರ್ಯಾಚರಣೆ ನಡೆಸಿ ಲಾರಿ (ಕೆಎ.35.7020) ಯನ್ನು ವಶಪಡಿಸಿ ಕೊಂಡಿದ್ದಾರೆ. ಲಾರಿಯಲ್ಲಿದ್ದ ಲೋಡರ್ ನವೀನ್ ಎಂಬಾತನನ್ನು ಬಂಧಿಸಲಾಗಿದೆ.

ಹಾರಂಗಿಯ ಮೋಹನ್ ಎಂಬವರಿಗೆ ಸೇರಿದ ಲಾರಿಯನ್ನು ವಶಪಡಿಸಿಕೊಂಡಿದ್ದು ಚಾಲಕ ಕುಶಾಲಪ್ಪ ಮತ್ತು ಮಾಲೀಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.