ಸೋಮವಾರಪೇಟೆ, ಮಾ. 25: ಪಟ್ಟಣ ಪಂಚಾಯಿತಿ ವತಿಯಿಂದ ವೆಂಕಟೇಶ್ವರ ಬ್ಲಾಕ್ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಪುರುಷ ಸಮಾನವಾಗಿ ಬೆಳೆದಿದ್ದಾಳೆ. ಮಹಿಳೆಯರು ತಮ್ಮ ಮನೆ ಪರಿಸರದ ಸ್ವಚ್ಛತೆಯ ಕಡೆಗೂ ಹೆಚ್ಚಿನ ಗಮನ ಹರಿಸುವದರೊಂದಿಗೆ, ನೀರಿನ ಅಮೂಲ್ಯತೆಯನ್ನು ಅರಿತುಕೊಂಡು ಮಿತವ್ಯಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಮಹಿಳಾ ಸಮಾಜದ ಅಧ್ಯಕ್ಷೆ ನಳಿನಿ ಗಣೇಶ್ ಮಾತನಾಡಿ, ಸಮಾಜದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಮಹಿಳೆಯರು ಇನ್ನಷ್ಟು ಸಂಘಟಿತರಾಗಬೇಕಿದೆ ಎಂದರು.
ಪ್ರಬಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಶೋಧಾ, ಮಕ್ಕಳ ಸಹಾಯವಾಣಿ ಕೇಂದ್ರದ ಕಾರ್ಯಕರ್ತೆ ಕುಮಾರಿ ಮಾತನಾಡಿದರು. ಸಮಾರಂಭದಲ್ಲಿ ಚುನಾವಣಾ ಬೂತ್ ಮಟ್ಟದ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ, ತಾಲೂಕು ಆಡಳಿತದ ಪ್ರಶಂಸೆಗೆ ಪಾತ್ರರಾಗಿದ್ದ ವೆಂಕಟೇಶ್ವರ ಬ್ಲಾಕ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜೆನಿಫರ್ ತಾರಾ ಲೋಬೋ ಅವರನ್ನು ಪಟ್ಟಣ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಸದಸ್ಯೆ ಮೀನಾಕುಮಾರಿ ವಹಿಸಿದ್ದರು.
ವೇದಿಕೆಯಲ್ಲಿ ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಸುಶೀಲಾ, ಸದಸ್ಯೆ ಸುಷ್ಮಾ, ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯಕುಮಾರ್, ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವೈ.ಎಸ್. ಶೈಲಾ, ಕುಸುಮಾ, ಶಿಕ್ಷಕಿ ಕವಿತಾ, ಶೈಲಾ ವಸಂತ್ ಉಪಸ್ಥಿತರಿದ್ದರು.