ಮಡಿಕೇರಿ, ಮೇ, 16: ಮಕ್ಕಳು ಗಾಜಿನಂತೆ, ಗಾಜು ಬಿದ್ದರೆ ಹೇಗೆ ಪುಡಿ ಪುಡಿಯಾಗುತ್ತದೆಯೋ, ಅದೇ ರೀತಿ ಮಕ್ಕಳ ಬಗ್ಗೆ ನಿಗಾ ವಹಿಸದಿದ್ದರೆ ಬದುಕು ಚೂರು ಚೂರಾಗುವ ಸಾಧ್ಯತೆ ಇದೆ. ಆದ್ದರಿಂದ ಪೋಷಕರು, ಸಮಾಜ ಸೇರಿದಂತೆ ಎಲ್ಲರೂ ಮಕ್ಕಳ ಕಡೆ ವಿಶೇಷ ಗಮನ ಹರಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧಿಸಿದಂತೆ ಇಂದು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆ, ಪೋಷಣೆಗೆ ಸಂಬಂಧಿಸಿದಂತೆ ಎಲ್ಲೆಲ್ಲಿ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸಿಕೊಂಡು ಮಕ್ಕಳ ಜೀವನ ಉತ್ತಮ ಪಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧ್ಯಕ್ಷರು ನುಡಿದರು.

ಬಾಲಮಂದಿರಗಳಲ್ಲಿ ಮಕ್ಕಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆ ಮಾಡಿ ಉತ್ತಮ ಮಾರ್ಗದರ್ಶನ ಮಾಡುವತ್ತ ವಿಶೇಷ ಆಸಕ್ತಿ ವಹಿಸಬೇಕು. ನಿರ್ಗತಿಕ ಮಕ್ಕಳು, ಬಿಕ್ಷಾಟನೆಗೆ ದೂಡಿರುವ ಮಕ್ಕಳನ್ನು ಗುರುತಿಸಿ ಬಾಲ ಮಂದಿರಕ್ಕೆ ಕರೆತಂದು ಪೋಷಣೆ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.

ಅಂಗನವಾಡಿಗಳಲ್ಲಿ ಮತ್ತು ಶಾಲೆಗಳಲ್ಲಿ ಮಕ್ಕಳ ಆರೈಕೆ ಉತ್ತಮವಾಗಿರಬೇಕು. ಅಂಗನವಾಡಿ ಹಾಗೂ ಶಾಲೆಗಳಲ್ಲಿ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್ ವ್ಯವಸ್ಥೆ ಇರಬೇಕು ಎಂದು ಅವರು ಸೂಚನೆ ನೀಡಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವಿಶೇಷ ಆಸಕ್ತಿ ವಹಿಸಬೇಕು. ಹತ್ತಿರದ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತಾಗಲು ಮನವರಿಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ಸಂಬಂಧಿಸಿದಂತೆ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮತ್ತಷ್ಟು ಜಾಗೃತಿ ಅಗತ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧಿಸಿದಂತೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಸಾರ್ವಜನಿಕ ಶಿಕ್ಷಣ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಒಟ್ಟುಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರು ಮಾತನಾಡಿ ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡಬೇಕು ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ ಅವರು ಜಿಲ್ಲೆಯಲ್ಲಿ ಶಾಲೆಗಳ ಸ್ಥಿತಿಗತಿ ಮತ್ತಿತರ ಸಂಬಂಧ ಹಲವು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್, ಮಕ್ಕಳ ಹಕ್ಕುಗಳ ಬಗ್ಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬಿ.ಸಿ.ಎಂ. ಇಲಾಖೆಯ ಅಧಿಕಾರಿ ಕೆ.ವಿ.ಸುರೇಶ್, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ, ಸ್ವಸ್ಥ ಸಂಸ್ಥೆಯ ಆರತಿ ಸೋಮಯ್ಯ, ಸ್ವಸ್ಥ ಸಂಸ್ಥೆಯ ಪ್ರತಿನಿಧಿ ಮುರುಗೇಶ್ ಇದ್ದರು.