ಸೋಮವಾರಪೇಟೆ, ಮೇ 17: ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಯುವ ಮೋರ್ಚಾದ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳ 50ಕ್ಕೂ ಅಧಿಕ ಕಾರ್ಯ ಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಳನ ರವಿ ವಹಿಸಿದ್ದರು. ಕಾರ್ಯ ಕರ್ತರನ್ನು ಪಕ್ಷಕ್ಕೆ ಬರಮಾಡಿ ಕೊಂಡ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪಕ್ಷದ ತಾಲೂಕು ಅಧ್ಯಕ್ಷ ಕೊಮಾರಪ್ಪ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ಗಗನ್ ಗಪ್ಪಣ್ಣ, ತಾಲೂಕು ಕಾರ್ಯದರ್ಶಿ ಬಾಬುರಾಜೇಂದ್ರ ಪ್ರಸಾದ್, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಮಹೇಶ್ ತಿಮ್ಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ‘ನರೇಂದ್ರ ಮೋದಿ ನಿಮಗೆ ಗೊತ್ತೇ?’ ಎಂಬ ಪುಸ್ತಕವನ್ನು ಬಿಜೆಪಿ ಸೇರ್ಪಡೆಗೊಂಡವರಿಗೆ ನೀಡಲಾಯಿತು.