ಸೋಮವಾರಪೇಟೆ, ಮೇ 24: ಸೋಮವಾರಪೇಟೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃಧ್ದಿ ಕಾರ್ಯಗಳನ್ನು ಕೈಗೊಳ್ಳಲು ತಮ್ಮ ಅನುದಾನದಿಂದ ರೂ. 20 ಲಕ್ಷ ಒದಗಿಸುವದಾಗಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಭರವಸೆ ನೀಡಿದರು.ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆಯ ಬಗ್ಗೆ ಗಮನ ಸೆಳೆದಾಗ, ಸೋಮವಾರಪೇಟೆ, ಕುಶಾಲನಗರ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಸಿಬ್ಬಂದಿಗಳ ಕೊರತೆ ಇರುವದನ್ನು ಸಂಬಂಧಿಸಿದ ಪೌರಾಡಳಿತ ಸಚಿವ ಈಶ್ವರ್ ಖಂಡ್ರೆಯವರ ಗಮನಕ್ಕೆ ತರಲಾಗಿದೆ. ಸದ್ಯದಲ್ಲಿಯೇ ಸಮಸ್ಯೆ ಪರಿಹರಿಸುವದಾಗಿ ಭರವಸೆ ನೀಡಿದ್ದಾರೆ ಎಂದರು.

ಪ.ಪಂ. ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಹೆಚ್ಚಾಗಿರುವ ಬಗ್ಗೆ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಗಮನ ಸೆಳೆದಾಗ, ಜನರಲ್ಲಿ ತಪ್ಪು ಮಾಹಿತಿಯಿಂದ ಕಸ ವಿಲೇವಾರಿ ಸಮಸ್ಯೆ ಹೆಚ್ಚಾಗಿದೆ. ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಲ್ಲಿ ಮಾತ್ರ ಕಸ ವಿಲೇವಾರಿ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಮಾತನಾಡಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಮಾಡಲಾಗಿದೆ. ಬರದ ನಡುವೆಯೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಾರುಕಟ್ಟೆಯನ್ನು ಅಭಿವೃದ್ದಿಪಡಿಸಲು ಯೋಜಿಸಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು. ಪಟ್ಟಣ ಪಂಚಾಯಿತಿಯಿಂದ ಶಾಸಕರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಶೀಲ, ಪ.ಪಂ.ಸದಸ್ಯರಾದ ಬಿ.ಎಂ. ಸುರೇಶ್, ಲೀಲಾ ನಿರ್ವಾಣಿ, ಸುಷ್ಮಾ, ವೆಂಕಟೇಶ್, ಶೀಲಾ ಡಿಸೋಜ, ಮೀನಕುಮಾರಿ, ನಾಗರಾಜು, ಇಂದ್ರೇಶ್ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮತ್ತಿತರರು ಉಪಸ್ಥಿತರಿದ್ದರು.