ಮಡಿಕೇರಿ, ಜು. 7: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‍ನಲ್ಲಿ ಮಡಿವಾಳರ ಸಂಘದ ಕಾರ್ಯಕರ್ತ, ಶರತ್ ಎಂಬವರ ಮೇಲೆ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಮಡಿವಾಳರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿಯನ್ನು ಮಾಡಿದರು.

ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಎಂ.ಡಿ. ನಂಜಪ್ಪ ಮಾತನಾಡಿ, ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಇರಿತಕ್ಕೊಳಗಾಗಿರುವ ಶರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಈ ಕೂಡಲೇ ಪೆÇಲೀಸರು ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಶರತ್ ಕುಟುಂಬಕ್ಕೆ ಸರಕಾರ ರೂ. 5 ಲಕ್ಷ ಪರಿಹಾರವನ್ನು ನೀಡಿ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯನ್ನು ತಪ್ಪಾಗಿ ಪ್ರತಿಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಜಿ. ಮಂಜುನಾಥ್, ಖಜಾಂಚಿ ಎಂ.ಎಲ್. ಸತೀಶ್, ಪ್ರಮುಖ ಕಮಲ್ ಕುಮಾರ್ ಉಪಸ್ಥಿತರಿದ್ದರು.