ಮಡಿಕೇರಿ, ಸೆ. 15: ಜಿಲ್ಲೆಯ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸಲಹೆ ಮಾಡಿದ್ದಾರೆ.

ಪೌರಾಡಳಿತ ನಿರ್ದೇಶನಾಲಯ, ರಾಜ್ಯ ನಗರಾಭಿವೃದ್ಧಿ ಸಂಸ್ಥೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ರಾಷ್ಟ್ರೀಯ ನಗರ ಜೀವನೋಪಾಯಗಳ ಅಭಿಯಾನದಡಿ ನಗರ ಮತ್ತು ಪಟ್ಟಣ ಬೀದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಅಧಿನಿಯಮ 2014 ಕುರಿತು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಬೀದಿ ವ್ಯಾಪಾರಿಗಳ ಆರ್ಥಿಕ ಸ್ಥಿತಿ ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಮಾತನಾಡಿ, ದೇಶದಲ್ಲಿ ಬೀದಿ ಬದಿ 1 ಕೋಟಿಯಷ್ಟು ಜನರು ವ್ಯಾಪಾರ ಮಾಡುತ್ತಿದ್ದಾರೆ. ಬೀದಿ ವ್ಯಾಪಾರಿಗಳ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕಿದೆ ಎಂದು ಸಲಹೆ ಮಾಡಿದರು.

ತರಕಾರಿ, ಹಣ್ಣು, ಹೂ ಹೀಗೆ ವಿವಿಧ ರೀತಿಯ ದಿನಬಳಕೆ ವಸ್ತುಗಳನ್ನು ಬೀದಿ ಬದಿಯಲ್ಲಿ ಮಾರಾಟ ಮಾಡಿ ಬದುಕು ಕಟ್ಟಿಕೊಳ್ಳುವವರು ಸಾಕಷ್ಟು ಮಂದಿ ಇದ್ದಾರೆ. ಒಂದು ಕಡೆ ಬೀದಿ ಬದಿ ವ್ಯಾಪಾರಿಗಳು, ಮತ್ತೊಂದು ಕಡೆ ಸಾರ್ವಜನಿಕರ ಓಡಾಟ. ಎರಡನ್ನು ಗಮನಿಸಬೇಕಿದೆ. ಬೀದಿ ಬದಿ ವ್ಯಾಪಾರಿಗಳ ಬಗ್ಗೆ ಮಾನವೀಯತೆ ತೋರಿಸಬೇಕಿದೆ ಎಂದರು.

ಬೀದಿ ಬದಿ ವ್ಯಾಪಾರಿಗಳಿಗೂ ಸಹ ದಿನಾಚರಣೆ ಇದ್ದು, ನವೆಂಬರ್ 14 ರಂದು ಅಂತರರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ರಾಜೇಂದ್ರ ಪ್ರಸಾದ್ ಹೇಳಿದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕÀ ಗೋಪಾಲಕೃಷ್ಣ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಎಸ್.ಐ.ಯು.ಡಿ. ಸಂಸ್ಥೆಯ ತರಬೇತಿ ಸಂಯೋಜಕ ಮಂಜುನಾಥ್, ಮಾನವ ಹಕ್ಕುಗಳ ಹೋರಾಟಗಾರ ಜಿ.ಎನ್. ವಿಶ್ವನಾಥ್, ವಕೀಲ ಮಾದಪ್ಪ, ನಗರಸಭೆ ಪೌರಾಯುಕ್ತೆ ಬಿ. ಶುಭ, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಬೀದಿ ವ್ಯಾಪಾರಿ ಸಂಘದ ಪ್ರಮುಖರು ಇದ್ದರು.