ವೀರಾಜಪೇಟೆ, ನ. 28: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಸಾಧನೆಯನ್ನು ಸಹಿಸದ ಕೆಲ ಕಿಡಿಗೇಡಿಗಳು ಮುಖ್ಯಮಂತ್ರಿಗಳ ಭಾವಚಿತ್ರಕ್ಕೆ ಸಗಣಿ ಎಸೆದು ತಮ್ಮ ವಿಕೃತಿಯನ್ನು ಮೆರೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು. ಮುಖ್ಯಮಂತ್ರಿಗಳ ಭಾವಚಿತ್ರವನ್ನು ವಿರೂಪಗೊಳಿಸದ್ದರೂ, ವೀರಾಜಪೇಟೆ ತಹಶೀಲ್ದಾರರು ಯಾವದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ವೀರಾಜಪೇಟೆ ಬ್ಲಾಕ್ ಹಾಗೂ ನಗರ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಬಳಿಕ ತಡವಾಗಿ ಎಚ್ಚೆತ್ತ ಅಧಿಕಾರಿಗಳು ಮುಖ್ಯಮಂತ್ರಿಗಳ ಭಾವಚಿತ್ರದ ಫ್ಲೆಕ್ಸ್ ಶುಚಿಗೊಳಿಸಿದರು.

ಬ್ಲಾಕ್ ಅಧ್ಯಕ್ಷ ಆರ್.ಕೆ ಸಲಾಂ ಮಾತನಾಡಿ, ರಾಜ್ಯ ಸರಕಾರದ ಅಭಿವೃದ್ಧಿಯನ್ನು ಸಹಿಸದ ಕೆಲ ಕಿಡಿಗೇಡಿಗಳು ತಮ್ಮ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ. ಮೋಹನ್, ಬ್ಲಾಕ್ ಉಪಾಧ್ಯಕ್ಷ ಹನೀಫ್, ಎ.ಪಿ.ಎಂ.ಸಿ ಸದಸ್ಯ ಮಾಳೇಟಿರ ಬೋಪಣ್ಣ, ಬ್ಲಾಕ್ ಕಾರ್ಯದರ್ಶಿ ಶರಣು ನಂಜಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ಶಶಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.