ಮಡಿಕೇರಿ, ಡಿ.1 : ಜಾತ್ಯಾತೀತ ಜನತಾದಳವನ್ನು ತಳಮಟ್ಟದಿಂದ ಸಂಘಟಿಸುವ ಪ್ರಕ್ರಿಯೆಗೆ ನಗರದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಎಲ್ಲಾ ವಾರ್ಡ್‍ಗಳಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ತಾ.3ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ ಎಂದು ಜೆಡಿಎಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಹಿರಿಯ ಮುಖಂಡ ಜಿ.ಟಿ.ದೇವೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಹೆಚ್. ವಿಶ್ವನಾಥ್, ಕೊಡಗು ಜಿಲ್ಲಾ ಉಸ್ತುವಾರಿ ಹೆಚ್.ಡಿ. ಬಸವರಾಜು, ಮಾಜಿ ಸಚಿವ ಬಿ.ಎ.ಜೀವಿಜಯ ಸೇರಿದಂತೆ ಜಿಲ್ಲಾ ಸಮಿತಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಮಡಿಕೇರಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ವಾರ್ಡ್ ಸಮಿತಿಗಳನ್ನು ರಚಿಸಲಾಗಿದ್ದು, ಪಕ್ಷದ ಪದಾಧಿಕಾರಿಗಳನ್ನು ತಾ.3ರಂದು ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಿಸಲಾಗುವದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಗರಸಭಾ ಮಾಜಿ ಸದಸ್ಯ ಅಶ್ರಫ್, ರವಿಕಿರಣ್, ಧನಂಜಯ ಶೆಟ್ಟಿ, ಸುನಿಲ್ ಹಾಗೂ ಲೋಹಿತಾಕ್ಷ ಉಪಸ್ಥಿತರಿದ್ದರು.