ಮಡಿಕೇರಿ, ಡಿ. 1: ನೆಹರು ಯುವ ಕೇಂದ್ರ, ಜಿಲ್ಲಾ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೂಡಿಗೆಯ ಕಾರ್ಪೋ ರೇಶನ್ ಬ್ಯಾಂಕ್ ಸ್ವಯಂ ಉದ್ಯೋಗ ತರಬೇತಿ ಕೇಂದ್ರ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಯುವ ಜನರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಂಡಾಗ ಮಾತ್ರ ಅವರು ಉತ್ತಮ ರೀತಿಯಲ್ಲಿ ಜೀವನ ನಡೆಸಬಹುದಾಗಿದೆ. ಯುವ ಜನತೆ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ತರಬೇತಿ ಪಡೆಯುವದು ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಪಾಂಡು ವಿಜಯನ್ ಮಾತನಾಡಿ, ಯುವ ಜನಾಂಗಕ್ಕೆ ತರಬೇತಿಯ ಅವಶ್ಯಕತೆ ಇದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದು ಗ್ರಾಮೀಣ ಜನತೆಗೆ ಮಾಹಿತಿ ನೀಡಿ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಬೇಕು. ಮಾಹಿತಿ ಮತ್ತು ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲಪುತ್ತಿಲ್ಲ. ಯುವಜನತೆ ಅವರಿಗೆ ಮಾಹಿತಿ ನೀಡಿ, ಸೌಲಭ್ಯದ ಬಗ್ಗೆ ತಿಳಿಹೇಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಬಿ. ಜೋಯಪ್ಪ, ನೆಹರು ಯುವ ಕೇಂದ್ರದ ಅಧಿಕಾರಿ ಫ್ರಾನ್ಸಿಸ್ ಇತರರು ಇದ್ದರು.