ಮಡಿಕೇರಿ, ಡಿ. 2: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಿತೀಯ ವರ್ಷದ ಅಭ್ಯುದಯ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉದ್ಘಾಟಿಸಿ ಮಾತನಾಡಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಕಲ ರೀತಿಯಲ್ಲಿಯೂ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುವದಾಗಿ ತಿಳಿಸಿ, ಕನ್ನಡ ಮತ್ತು ವೈದ್ಯಕೀಯ ಶಿಕ್ಷಣದ ಹಿರಿಮೆಯನ್ನು ಎತ್ತಿ ಹಿಡಿಯುವಂತೆ ಕರೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಆಚಾರ, ವಿಚಾರ ವೃತ್ತಿಯಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ನಿವೃತ್ತ ವೈದ್ಯಕೀಯ ಅಧೀಕ್ಷಕ ಡಾ. ಕೆ.ಬಿ. ಮುತ್ತಪ್ಪ ಕನ್ನಡದ ಹಿರಿಮೆಯನ್ನು ತಿಳಿಸಿಕೊಟ್ಟರು. ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಅಭ್ಯುದಯದ ಪ್ರಯುಕ್ತ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ವೈದ್ಯರಿಗೆ ಏರ್ಪಡಿಸಿದ್ದ ಚಟುವಟಿಕೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ವೈದ್ಯರಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.