ಸೋಮವಾರ ಪೇಟೆ, ಡಿ. 5: ಶನಿವಾರಸಂತೆಯ ಕೆಆರ್‍ಸಿ ಸರ್ಕಲ್‍ನ ಸಮೀಪ ದಲಿತ ವ್ಯಕ್ತಿಗೆ ಜಾತಿನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಗಳನ್ನು ಬಂಧಿಸುವಲ್ಲಿ ಶನಿವಾರಸಂತೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಎಸ್. ವಿರೇಂದ್ರ ಆರೋಪಿಸಿದ್ದಾರೆ.

ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಬೆಳ್ಳಾರಳ್ಳಿ ಗ್ರಾಮದ ಆಟೋ ಚಾಲಕರಾದ ಸುರೇಶ ಮತ್ತು ಉಮೇಶ್ ವಿರುದ್ಧ ಸೆ. 23 ರಂದು ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದರೂ ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು.

ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ದೌರ್ಜನ್ಯ ಸಂತ್ರಸ್ಥರಿಗೆ ಭದ್ರತೆ ನೀಡಬೇಕು. ತಪ್ಪಿದಲ್ಲಿ ಶನಿವಾರಸಂತೆ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಹೇಳಿದರು. ಶಾಸಕ ಅಪ್ಪಚ್ಚು ರಂಜನ್ ಅವರು ಸಾಮಾಜಿಕ ಜವಾಬ್ದಾರಿಯಿಂದ ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಹಾಸನ ಜಿಲ್ಲಾ ಸಂಚಾಲಕ ಜಗದೀಶ್ ಹಡ್ಲಹಳ್ಳಿ ಆಗ್ರಹಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಡಿ.ಎಸ್. ಕಾಂತರಾಜ್ ಇದ್ದರು.