ಮಡಿಕೇರಿ, ಡಿ. 5: ಹುಣಸೂರಿನಲ್ಲಿ ಹನುಮ ಜಯಂತಿ ಕಾರ್ಯಕ್ರಮಕ್ಕೆ ಮಾಲಾಧಾರಿಯಾಗಿ ತೆರಳುತ್ತಿದ್ದ ಕೊಡಗು-ಮೈಸೂರು ಸಂಸದ, ಭಾಜಪ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್ ಸಿಂಹ ಅವರನ್ನು ತಡೆದು ಕಾನೂನು ದುರ್ಬಳಕೆ ಮಾಡಿ ಬಂಧಿಸಿದ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಮಡಿಕೇರಿ ನಗರ ಬಿಜೆಪಿಯಿಂದ ಇಂದು ಸಂಜೆ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರ, ಮೈಸೂರು ಪೊಲೀಸರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದರು. ಶಾಸಕರುಗಳಾದ ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕಾಳಪ್ಪ, ತಾಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ನಗರಸಭೆ ಉಪಾಧ್ಯಕ್ಷ ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ಕಾರ್ಯದರ್ಶಿ ಕೆ.ಬಿ. ಜಗದೀಶ್ ಸೇರಿದಂತೆ ಪಕ್ಷದ ನಾಯಕರುಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.