ಸೋಮವಾರಪೇಟೆ, ಡಿ. 5: ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವದು ಸಾಮಾಜಿಕ ಜವಾಬ್ದಾರಿ ಯಾಗಿದ್ದು, ಈ ಕಾರ್ಯಕ್ಕೆ ಸರ್ಕಾರ ದೊಂದಿಗೆ ಎಲ್ಲರೂ ಕೈಜೋಡಿಸಬೇಕು. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಹೇಳಿದರು.
ಇಲ್ಲಿನ ಚನ್ನಬಸಪ್ಪ ಸಭಾಂಗಣ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಕಲಚೇತನರಿಗೆ ಸಾಮಾಜಿಕ ವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಹೆಚ್ಚಿನ ಮೀಸಲಾತಿ ನೀಡಬೇಕೆಂದು ಡಾ. ಅಂಬೇಡ್ಕರ್ ರವರು ಪ್ರಬಲವಾಗಿ ಪ್ರತಿಪಾದಿಸಿದ್ದರು. ಆದರೆ ಕೆಲವರು ನಕಲಿ ವೈದ್ಯಕೀಯ ದೃಢೀಕರಣ ಪತ್ರವನ್ನು ಪಡೆಯುತ್ತಿ ರುವದರಿಂದ ನೈಜ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಿಲ್ಲ. ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವೈದ್ಯರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೆ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ವಿಕಲಚೇತನರು ಅತ್ಯಂತ ಕುಶಾಗ್ರಮತಿಗಳಾಗಿದ್ದು, ಅವರನ್ನು ಪೋಷಕರು ಭಿಕ್ಷೆ ಬೇಡಲು ಪ್ರೇರೇಪಿಸದೆ ಉತ್ತಮ ಬದುಕು ಕಟ್ಟಿಕೊಡಲು ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು. ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್ ಮಾತನಾಡಿ, ಊನತೆ ಶಾಪವಲ್ಲ. ವಿಕಲಚೇತನರು ಸಮಾಜದಲ್ಲಿ ವಿವಿಧ ಕ್ಷೇತ್ರಗಳನ್ನು ಆಯ್ಕೆಮಾಡಿಕೊಂಡು ಮುನ್ನಡೆಯುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್ ಉಪಸ್ಥಿತರಿದ್ದರು. ಕ್ಷೇತ್ರ ಸಮನ್ವಯ ಶಿಕ್ಷಕಿ ರತ್ನಮ್ಮ ನಿರೂಪಿಸಿದರೆ, ಕೇಶವಮೂರ್ತಿ ಸ್ವಾಗತಿಸಿ, ವೆಂಕಟೇಶ್ ವಂದಿಸಿದರು. ನಂತರ ವಿಕಲಚೇತನ ಮಕ್ಕಳಿಗೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ನಡೆಸಲಾಯಿತು.