ಒಡೆಯನಪುರ, ಡಿ. 5: ಪ್ರತಿಯೊಬ್ಬರ ಅಂತರಂಗದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆಯ ಜೊತೆಯಲ್ಲಿ ಭಯ-ಭಕ್ತಿಯನ್ನು ಮೈಗೂಡಿಸಿಕೊಂಡರೆ ಅಂತರಂಗವೂ ಶುದ್ಧಿಗೊಂಡು ತನ್ನ ಜೀವನ ಹಸನಗೊಳುತ್ತದೆ ಎಂದು ಶಕ್ತಿ ದಿನಪತ್ರಿಕೆಯ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್ ಅಭಿಪ್ರಾಯಪಟ್ಟರು.
ಸಮೀಪದ ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೋಮವಾರಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯ ದಲ್ಲಿ ಹಮ್ಮಿ ಕೊಂಡಿದ್ದ ಸಾಮೂ ಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮದ ನಂತರ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರ ದೈನಂದಿನ ಬದುಕಿಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಿಂತನೆಯ ಅಗತ್ಯ ಇರುತ್ತದೆ. ಇದರಿಂದ ಜೀವನವೂ ಸಂಸ್ಕಾರಗೊಳ್ಳುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಏಳಿಗೆ, ಆರ್ಥಿಕ ಸಬಲೀಕರಣ, ಶಿಕ್ಷಣ ಸಬಲೀಕರಣ ಅಭಿವೃದ್ಧಿ, ಆರೋಗ್ಯ ಮತ್ತು ಸ್ವಚ್ಛತೆ, ಸಾಮಾಜಿಕ ಸೇವೆ ಮುಂತಾದ ಕಾರ್ಯಕ್ರಮದ ಜೊತೆಯಲ್ಲಿ ಧಾರ್ಮಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಉದ್ದೇಶದಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಪ್ರತಿಯೊಬ್ಬರಲ್ಲಿ ಧಾರ್ಮಿಕ ಮತ್ತು ಆದ್ಯಾತ್ಮಿಕವಾಗಿ ಭಯ ಭಕ್ತಿಯನ್ನು ಮೂಡಿಸುವ ಸಲುವಾಗಿ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆಯನ್ನು ಸಾಮೂಹಿಕವಾಗಿ ನಡೆಸಲಾಗುತ್ತಿದೆ ಎಂದರು.ಜಿ.ಪಂ. ಸದಸ್ಯೆ ಸರೋಜಮ್ಮ ಮಾತನಾಡಿ, ಸಾಮೂಹಿಕ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರಿಂದ ಪ್ರತಿಯೊಬ್ಬರಲ್ಲಿ ಭಕ್ತಿಯ ಮನೋಭಾವನೆ ಮೂಡಿ ಸಮಾಜ ಭಕ್ತಿಯ ಮಾರ್ಗದಲ್ಲಿ ಮುನ್ನಡೆಯುತ್ತದೆ ಎಂದರು. ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್, ಪೂಜಾ ಕಾರ್ಯಕ್ರಮ ಸಮಿತಿ ಗೌರವಾಧ್ಯಕ್ಷ ಸಿ.ಎಲ್. ಸುಬ್ಬಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೂಜಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಜಿ.ಜಿ. ಪರಮೇಶ್ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವಲಯ ಮೇಲ್ವಿಚಾರಕರಾದ ಸುಬ್ರಮಣಿ, ಕೆ. ರಮೇಶ್, ಸೇವಾ ಪ್ರತಿನಿಧಿಗಳಾದ ರುಬಿನಾ, ಮಾಲತಿ, ತಾರಾಮಣಿ, ಮಹೇಶ್, ಸಮಿತಿ ಪದಾಧಿಕಾರಿಗಳು, ವಿವಿಧ ಸ್ವಸಹಾಯ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು. ಪೂಜಾ ಕಾರ್ಯಕ್ರಮದ ಅಂಗವಾಗಿ ಅನ್ನದಾನವನ್ನು ಏರ್ಪಡಿಸಲಾಗಿತ್ತು.