ಕೂಡಿಗೆ, ಡಿ. 8: ಪೊಲೀಸರು ಕಾನೂನಾತ್ಮಾಕವಾಗಿ ಕಾರ್ಯ ನಿರ್ವಹಿಸಲು ಮತ್ತು ನೀತಿ ನಿಯಮಗಳನ್ನು ಪಾಲಿಸಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಸಾರ್ವಜನಿಕರು ಸಹಕಾರ ನೀಡಬೇಕು. ಅಲ್ಲದೆ, ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಾದ ಗಾಂಜಾ ಮಾರಾಟ, ಸೇವನೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ. ಮಹೇಶ್ ಹೇಳಿದರು.

ಕೂಡಿಗೆಯಲ್ಲಿ ನಡೆದ ಪೊಲೀಸ್ ಗ್ರಾಮ ಸಂಪರ್ಕ ಸಭೆಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಗಾಂಜಾ ಸೇವಿಸಿ ವಾಹನ ಚಾಲನೆ ಮಾಡಿ ಅಪಘಾತದಲ್ಲಿ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ. ಪೊಲೀಸರಿಗೆ ತಿಳಿಯದ ರೀತಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಯುವ ಪೀಳಿಗೆ ಮುಂದಾಗಿದ್ದಾರೆ. ಇದನ್ನು ತಡೆಯಲು ಸಾರ್ವಜನಿಕರು ಇಂತಹ ವಿಷಯಗಳನ್ನು ಪೊಲೀಸರಿಗೆ ತಿಳಿಸಿ ಮುಂದಿನ ಕ್ರಮ ಕೈಗೊಳ್ಳಲು ಸಹಾಯ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.