ಸುಂಟಿಕೊಪ್ಪ, ಡಿ. 10: ಆಧುನಿಕ ಯುಗದಲ್ಲಿ ಶಿಕ್ಷಣದಲ್ಲಿ ಪೈಪೋಟಿ ಹೆಚ್ಚಾಗುತ್ತಿದ್ದು, ಇದರಿಂದ ಸಮಾಜ ಕಟ್ಟುವ ಕೆಲಸಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಕಳವಳ ವ್ಯಕ್ತಪಡಿಸಿದರು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತ ನಾಡಿದರು.

ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆಯ ವಿದ್ಯಾರ್ಥಿಯೂ ಮಡಿಕೇರಿ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೂ ಮೂಳೆ ತಜ್ಞ ಡಾ. ಮೋರಿಯಲ್ ಹಕ್ ಸಿದ್ಧಿಕಿ ಪಾಲ್ಗೊಂಡು ವಿದ್ಯಾರ್ಥಿಗಳು ಎಂತಹ ಕಠಿಣ ಸಂದರ್ಭದಲ್ಲೂ ಎದೆ ಗುಂದದೆ ಆತ್ಮ ಸ್ಥೈರ್ಯದಿಂದ ವಿದ್ಯಾರ್ಜನೆ ಕಡೆ ಗಮನಕೊಡಬೇಕು ಎಂದರು.

ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ ಜ್ಞಾನ ವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆ, ಕ್ರೀಡೆಯಲ್ಲೂ ತಮ್ಮ ಪ್ರತಿಭೆಯನ್ನು ಮೈಗೂಡಿಸಿ ಕೊಂಡು ಉನ್ನತ ಶಿಕ್ಷಣ ಪಡೆಯಬೇಕೆಂದು ಹೇಳಿದರು.

ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಮಡಿಕೇರಿ ವೈದ್ಯಕೀಯ ಕಾಲೇಜಿನ ಮೂಳೆ ತಜ್ಞ ಡಾ. ಮೋರಿಯಲ್ ಹಕ್ ಸಿದ್ಧಿಕಿ ಹಾಗೂ ಎಸ್‍ಎಸ್ ಎಲ್‍ಸಿ ಪರೀಕ್ಷೆಯಲ್ಲಿ ಕೊಡಗಿಗೆ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆಯ ಹಳೆಯ ವಿದ್ಯಾರ್ಥಿನಿ ಬಿ. ನವ್ಯಾಳನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಶಾಲೆಯ ಗೌರವ ಕಾರ್ಯದರ್ಶಿ ಕೆ.ಎಸ್. ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷೆ ಮೀನಾ ಸೋಮಯ್ಯ, ಸದಸ್ಯ ಎಂ.ಕೆ. ಕುಟ್ಟಪ್ಪ, ನಿವೃತ್ತ ಮುಖ್ಯೋಪಾಧ್ಯಾಯಿನಿ ಕೆ.ಎಸ್. ಸಾವಿತ್ರಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಬಿ. ಶಂಕರ್, ಶಾಲೆಯ ಮುಖ್ಯೋಪಾಧ್ಯಾಯನಿ ಇಂದಿರಾ ಉಪಸ್ಥಿತರಿದ್ದರು.

ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾ ಧ್ಯಾಯಿನಿ ಇಂದಿರಾ ಸ್ವಾಗತಿಸಿ, ಶಿಕ್ಷಕ ಗುರ್ಕಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಸ್ಟೇಪಿ ವಂದಿಸಿದರು.