ಸೋಮವಾರಪೇಟೆ, ಡಿ. 10: ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಅಶಾಂತಿ ಸೃಷ್ಟಿಯಾಗುತ್ತಿರುವದು ಜಾತಿ ವ್ಯವಸ್ಥೆ ಬಲವಾಗಿ ಬೇರೂರಿರುವದರ ಧ್ಯೋತಕ. ಇದನ್ನು ಹೋಗಲಾಡಿಸಿ ಮೊದಲು ನಾವು ಮನುಷ್ಯರಾಗಬೇಕು ಎಂದು ಇಲ್ಲಿನ ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಪ್ರತಿಕಾಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿರಿಯ ಸಿವಿಲ್ ನ್ಯಾಯಾಧೀಶ ಶ್ಯಾಂಪ್ರಕಾಶ್ ಅವರು ಮಾನವ ಹಕ್ಕುಗಳು ಮತ್ತು ಪೊಲೀಸ್ ಕಾಯಿದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ಮಾನವ ಹಕ್ಕುಗಳು ನಮಗೆ ಹುಟ್ಟಿನಿಂದಲೆ ಬಂದಿದೆ. ಸಮಾಜದಲ್ಲಿ ಯಾರನ್ನೂ ಘಾಸಿಗೊಳಿಸದೆ ಗೌರವಯುತವಾಗಿ ಬದುಕುವದನ್ನು ರೂಢಿಸಿಕೊಳ್ಳಬೇಕು. ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತಿಯೊಂದು ಸರಕಾರಿ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳು ಆಚರಿಸಿದರೆ ಮಾತ್ರ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡುತ್ತದೆ ಎಂದರು.

ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ರಮೇಶ್, ಭ್ರಷ್ಟಾಚಾರಿ ವಿರೋಧಿ ಸಂಸ್ಥೆಯ ಪದಾಧಿಕಾರಿಗಳಾದ ರಮೇಶ್, ಧರಣಿ, ಜ್ಯೋತಿ ಅರುಣ್ ಉಪಸ್ಥಿತರಿದ್ದರು.