ಮಡಿಕೇರಿ, ಡಿ. 13: ಹಿಂದೂಪರ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ ಹತ್ಯೆ ಪ್ರಕರಣ ಖಂಡಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ವಿಶ್ವ ಹಿಂದೂ ಪರಿಷದ್, ಭಜರಂಗದಳದ ಕಾರ್ಯಕರ್ತರು ರಸ್ತೆ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಮೇಲಿನ ಹತ್ಯೆ ಹಲ್ಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ದೂರಿದರು.

ಪರೇಶ್ ಮೇಸ್ತ ಅವರದ್ದು ಸಹಜ ಸಾವು ಎಂದು ಹೇಳಲು ಸಾಧ್ಯವಿಲ್ಲ ಮರಣೋತ್ತರ ಪರೀಕ್ಷೆಯನ್ನು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿಯೇ ನಡೆಸಬೇಕು ಎಂದು ಆಗ್ರಹಿಸಿ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಮೆರವಣಿಗೆ ನಡೆಸಿದರು. ಪೊಲೀಸರು ರಾಜ್ಯ ಸರ್ಕಾರದ ಯಾವದೇ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯಪಾಲರು ಸೂಚಿಸಬೇಕೆಂದು ಒತ್ತಾಯಿಸಿ ಇದೇ ಸಂದರ್ಭ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ, ಬಿಜೆಪಿ ಮುಖಂಡರಾದ ರವಿ ಕುಶಾಲಪ್ಪ, ಎಂ.ಬಿ ದೇವಯ್ಯ, ಭಜರಂಗದಳ ಸಹ ಸಂಚಾಲಕ ಚೇತನ್, ತಾಲೂಕು ಸಂಚಾಲಕ ಗಣೇಶ್, ಪ್ರಮುಖರಾದ ಪ್ರಸನ್ನಭಟ್, ರವಿ ಕಾಳಪ್ಪ, ಧನಂಜಯ, ಅರುಣ್ ಶೆಟ್ಟಿ ಮತ್ತಿತರರಿದ್ದರು.