ಮಡಿಕೇರಿ, ಡಿ. 19: ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯ ಭಾಗಿತ್ವದಡಿ ಯುವ ಮತದಾರರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿ ದರು. ಚುನಾವಣೆ ಕುರಿತು ಜಾಗೃತಿ ಮೂಡಿಸುವಲ್ಲಿ 14 ರಿಂದ 17 ವಯೋಮಾನದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಆ ದಿಸೆಯಲ್ಲಿ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ತಾ. 20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಅಂತರ ಶಾಲಾ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲು ಮತ್ತು ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳು-ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನ ಮಾಡಲು ಭಾರತ ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ತಿಳಿಸಿದರು.

14 ರಿಂದ 17 ವಯೋಮಾನದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆ-ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು 14 ರಿಂದ 17 ವಯೋಮಾನದ ವಿದ್ಯಾರ್ಥಿಗಳನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಕರೆದುಕೊಂಡು ಬರುವಂತೆ ಕೋರಿದರು.

ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಭಾಗ್ಯ, ಜಿಲ್ಲಾ ಕೌಸಲ್ಯ ಅಭಿವೃದ್ಧಿ ಅಧಿಕಾರಿಗಳಾದ ಜಗನ್ನಾಥ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್. ಮೋಹನ್, ಚುನಾವಣಾ ತಹಶೀಲ್ದಾರ್ ಕುಂಜಮ್ಮ, ಚುನಾವಣಾ ಶಿರಸ್ತೆದಾರರಾದ ಟಿ.ಕೆ. ಪ್ರಕಾಶ್ ಇತರರು ಇದ್ದರು.