ಮಡಿಕೇರಿ, ಡಿ.22 : ವಿಜಯಪುರದಲ್ಲಿ ಇತ್ತೀಚೆಗೆ ನಡೆದ 9ನೇ ತರಗತಿ ವಿದ್ಯಾರ್ಥಿನಿ ದಾನೇಶ್ವರಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಬಹುಜನ ವಿದ್ಯಾರ್ಥಿ ಸಂಘ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಘಟನೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರೀಯ ಅಪರಾಧ ದಾಖಲೆಯ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ ಎಸ್.ಸಿ, ಎಸ್.ಟಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಸುಮಾರು 1.50 ಲಕ್ಷ ಮೀರಿದ್ದು, ಅತ್ಯಾಚಾರ ಪ್ರಕರಣಗಳು 10 ಸಾವಿರದಷ್ಟು ದಾಖಲಾಗಿದೆ ಎಂದು ಸಂಘದ ಪ್ರಮುಖರು ಆತಂಕ ವ್ಯಕ್ತಪಡಿಸಿದರು.
ಇಂದು ಓದಲು ಕಳುಹಿಸಿದ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತದೆ. ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವು ಹಲವು ಭಾಗ್ಯಗಳನ್ನು ಜಾರಿಗೆ ತಂದರೂ ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ಯಾವದೇ ಕ್ರಮ ಕೈಗೊಂಡಿಲ್ಲ. ದಲಿತರಿಗೆ ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಒದಗಿಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಂಘದ ಜಿಲ್ಲಾ ಸಂಯೋಜಕರಾದ ಸಿ.ಜೆ.ಮೋಹನ್ ಮೌರ್ಯ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮತ್ತಿತರ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.