ಸೋಮವಾರಪೇಟೆ, ಡಿ. 23: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯತ್ತಲೂ ಗಮನ ಹರಿಸುವ ಮೂಲಕ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ತೋರಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು. ಸಮೀಪದ ಮಸ ಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆಯಿದ್ದು, ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕಿದೆ. ಶಿಕ್ಷಣದೊಂದಿಗೆ ಕ್ರೀಡೆಯೂ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣವನ್ನು ಪಡೆಯುವ ಮೂಲಕ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿ ಎಂಸಿ ಅಧ್ಯಕ್ಷ ವಿ. ನಾಗ ರಾಜು ವಹಿಸಿದ್ದರು. ವೇದಿಕೆಯಲ್ಲಿ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ಉಪಾಧ್ಯಕ್ಷ ದಿವಾಕರ್ ಹಾಗೂ ಸದಸ್ಯರು, ತಾ.ಪಂ. ಸದಸ್ಯೆ ಸವಿತಾ ಈರಪ್ಪ, ಮಾಜಿ ತಾ.ಪಂ. ಅಧ್ಯಕ್ಷ ಎಸ್.ಎಂ. ಡಿಸಿಲ್ವ, ಜಿ.ಬಿ. ಸೋಮಯ್ಯ ಪ್ರಮುಖರಾದ ಉಷಾ ರವೀಂದ್ರ, ಶೋಭಾ ಗಣೇಶ್, ಶಾಲಾ ಮುಖ್ಯ ಶಿಕ್ಷಕ ಟಿ.ಡಿ. ನರೇಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಶಾಲೆಯ ಹಳೆಯ ವಿದ್ಯಾರ್ಥಿ ಟಿ.ಎಸ್. ಹೇಮಂತ್ ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಮಾಜಿ ಸೈನಿಕ ಇಸ್ಮಾಯಿಲ್ ಅವರನ್ನು ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.