ಹೆಬ್ಬಾಲೆ, ಜ. 2 : ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನದ ವತಿಯಿಂದ ಶಿರಂಗಾಲ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಅಂಗವಾಗಿ ಶಿಕ್ಷಕರ ಮಾರ್ಗದರ್ಶನದಡಿ ವಿದ್ಯಾರ್ಥಿಗಳು ತಯಾರಿಸಿ ಪ್ರದರ್ಶಿಸಿದ್ದ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಗಮನ ಸೆಳೆಯಿತು.
ವಸ್ತುಪ್ರದರ್ಶನವನ್ನು ಉದ್ಘಾಟಿಸಿದ ತಾ.ಪಂ.ಸದಸ್ಯ ಎನ್.ಎಸ್.ಜಯಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ವಿಜ್ಞಾನ ಬೆಳವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಎನ್.ಎಸ್.ರಮೇಶ್ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮೂಲವಿಜ್ಞಾನ ಕಲಿಕೆಯೊಂದಿಗೆ ಅವರಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವದು ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ವಿಜ್ಞಾನವನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರೇರಣೆ ನೀಡಿ, ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಗತಿಗೆ ಪ್ರೇರಣೆ ನೀಡಲು ಶ್ರಮಿಸುವದಾಗಿ ಭರವಸೆ ನೀಡಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಎನ್. ಮಂಜುನಾಥ್, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧನೆಯೊಂದಿಗೆ ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅವರಿಂದ ಉತ್ತಮ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಂಡಿರುವದು ಶ್ಲಾಘನೀಯ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶ್ವತ್ಥ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಎಚ್.ಕೆ.ಪ್ರಕಾಶ್, ಗ್ರಾ.ಪಂ.ಸದಸ್ಯ ದಿವ್ಯ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕರು ಇದ್ದರು.