ಕೂಡಿಗೆ, ಜ. 4: ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದ ಕಡೆಗೆ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಕ್ಷೇತ್ರಕ್ಕೆ ಸೇವೆ ಸಲ್ಲಿಸುವಂತಾಗಬೇಕು. ಪದವಿ ಪೂರ್ವ ಶಿಕ್ಷಣದಲ್ಲಿ ವಿಜ್ಞಾನ ಕಲಿಯುವ ಬಹುತೇಕ ವಿದ್ಯಾರ್ಥಿಗಳು ನಂತರದಲ್ಲಿ ವೃತ್ತಿಪರ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಮೂಲ ವಿಜ್ಞಾನ ಕ್ಷೇತ್ರದ ಕಡೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಸಕ್ತಿ ತೋರಿಸುವಂತೆ ಮಾಡ ಬೇಕಿದೆ ಎಂದು ತಾ.ಪಂ. ಸದಸ್ಯ ಜಯಣ್ಣ ಹೇಳಿದರು.

ಶಿರಂಗಾಲ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ದಿನ ಕಾರ್ಯಕ್ರಮದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ಎನ್.ಎಸ್. ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಸನ್ನ ಮಾತನಾಡಿದರು.

ಎಸ್‍ಡಿಎಂಸಿ ಅಧ್ಯಕ್ಷ ಅಶ್ವತ್ಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಹೆಚ್.ಕೆ. ಪ್ರಕಾಶ್, ಗ್ರಾ.ಪಂ. ಸದಸ್ಯೆ ದಿವ್ಯ ಮತ್ತಿತರರು ಇದ್ದರು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.