ಸೋಮವಾರಪೇಟೆ, ಜ.5 : ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕೈ ಬಲಪಡಿಸುವ ಮೂಲಕ ಕಾರ್ಯ ಕರ್ತರು ಇನ್ನಷ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಹುಸೇನ್ ಕರೆ ನೀಡಿದರು.
ಇಲ್ಲಿನ ಕಕ್ಕೆಹೊಳೆ ಜಂಕ್ಷನ್ನಲ್ಲಿರುವ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು, ಬಿಎಲ್ಓಗಳ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೇಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಸೋಮವಾರಪೇಟೆ ಬ್ಲಾಕ್ನಲ್ಲಿ ಪಕ್ಷದ ಸಂಘಟನೆ ಮಾಡಲಾಗಿದ್ದು, ಪ್ರತಿ ಬೂತ್ಗಳಲ್ಲೂ ಸಮಿತಿ ರಚನೆ ಮಾಡಲಾಗಿದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.