ಮಡಿಕೇರಿ, ಜ. 8: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮತ್ತೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಯೋರ್ವನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 12 ವರ್ಷ ಸಜೆ ವಿಧಿಸಿದೆ.ಮಡಿಕೇರಿಯ ಕೋಹಿನೂರು ರಸ್ತೆ ಬಳಿಯ ನಿವಾಸಿ, ಪಿ.ಎ. ಭರತ್ ಎಂಬಾತನೆ ಶಿಕ್ಷೆಗೊಳಗಾದ ವ್ಯಕ್ತಿ. ಭರತ್ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಿರಂತರ ಎರಡು ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ. ಮಾತ್ರವಲ್ಲದೆ ಆ ಬಾಲಕಿಯ ಸಹೋದರಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಸಂತ್ರಸ್ಥ ಬಾಲಕಿಯರ ತಾಯಿ ಮಡಿಕೇರಿ ನಗರ ಪೊಲೀಸ್ ಠಾಣೆಗೆ ತಾ. 7.4. 2013 ರಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭರತ್ ವಿರುದ್ಧ ಫೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭರತ್‍ನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿಯವರು ಆರೋಪಿ ಮೇಲೆ ಆರೋಪ ಸಾಬೀತಾದ್ದರಿಂದ 12 ವರ್ಷ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸೆಕ್ಷನ್ 376, 506, 323, 355, 504, 354 ರಂತೆ ಭರತ್ ವಿರುದ್ಧ ಪ್ರಕರಣ ದಾಖಲಾಗಿತ್ತು.