ಸೋಮವಾರಪೇಟೆ, ಜ. 8: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ತಾ. 15ರಂದು ಸೋಮವಾರಪೇಟೆಯಲ್ಲಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಚಿವರ ಸಹಿತ ಪಕ್ಷದ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ತಾ. 15ರಂದು ಬೆಳಿಗ್ಗೆ 10 ಗಂಟೆಗೆ ಸೋಮವಾರಪೇಟೆಯ ವಿವೇಕಾನಂದ ವೃತ್ತದಿಂದ ಬೃಹತ್ ಮೆರವಣಿಗೆ ನಡೆಯಲಿದೆ. ಕೇಂದ್ರ ಸರ್ಕಾರದ ಸಚಿವರುಗಳಾದ ಅನಂತ್‍ಕುಮಾರ್ ಹೆಗಡೆ, ಡಿ.ವಿ. ಸದಾನಂದ ಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಸಿ.ಟಿ. ರವಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರೂ, ಸಂಸದ ಪ್ರತಾಪ್ ಸಿಂಹ, ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಿವಿಧ ನಾಯಕರುಗಳು ಆಗಮಿಸಲಿದ್ದಾರೆ ಎಂದರು.

ಸಮಾವೇಶಕ್ಕೆ ಕೊಡಗು ಜಿಲ್ಲೆಯ ಪ್ರತಿ ಬೂತ್‍ನಿಂದ 10ಕ್ಕೂ ಅಧಿಕ ಯುವ ಮೋರ್ಚಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಇಲ್ಲಿನ ಜೇಸೀ ವೇದಿಕೆಯಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಕೊಡಗಿನಲ್ಲಿ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಯುವ ಮೋರ್ಚಾದ ಸಂಘಟನೆ ಯನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಪಕ್ಷಕ್ಕೆ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದು, ಸಮಾವೇಶದಲ್ಲಿ ಕೊಡಗಿನ ವಿವಿಧ ಭಾಗಗಳಿಂದ ವಿವಿಧ ಪಕ್ಷಗಳ ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಮುಖಂಡರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿಬ್ಬೆಟ್ಟ ಮಧು ತಿಳಿಸಿದರು.

ಗೋಷ್ಠಿಯಲ್ಲಿದ್ದ ಯುವ ಮೋರ್ಚಾ ಸೋಮವಾರಪೇಟೆ ನಗರಾಧ್ಯಕ್ಷ ಶರತ್‍ಚಂದ್ರ ಮಾತನಾಡಿ, ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಯುವ ಜನಾಂಗದ ಸಹಕಾರ ಅತೀ ಮುಖ್ಯವಾಗಿದ್ದು, ದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸುವಂತೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ವೇಗ ನೀಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗಗನ್ ಗಪ್ಪಣ್ಣ, ಶ್ರೀಕಾಂತ್ ಮುತ್ತಣ್ಣ, ತಾಲೂಕು ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಕಾರ್ಯದರ್ಶಿ ಕೃಷ್ಣಪ್ಪ, ಪದಾಧಿಕಾರಿಗಳಾದ ಪ್ರವೀಣ್, ಸೂರಿ ಉಪಸ್ಥಿತರಿದ್ದರು.