ಮಡಿಕೇರಿ, ಜ. 13: ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿ ಏನಾದರೂ ಬದಲಾವಣೆಗಳಿದ್ದಲ್ಲಿ ಅಥವಾ ಆಕ್ಷೇಪಣೆ ಸಲ್ಲಿಸುವದಿದ್ದಲ್ಲಿ ಅದಕ್ಕಾಗಿ ತಾ. 22ರವರೆಗೆ ಕಾಲಾವಕಾಶವನ್ನು ಕೇಂದ್ರ ಚುನಾವಣಾ ಆಯೋಗ ನೀಡಿದ್ದು, ಮತದಾರರು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾ. 22ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ಯಾವದೇ ಬದಲಾವಣೆ ಅಥವಾ ತಿದ್ದುಪಡಿಗಳಿದ್ದರೂ, ನಾಗರಿಕರು ಆ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು.
ತಾ. 1.1.2018ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿಗಳನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಅವಕಾಶವಿದೆ.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾರ್ವತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
(ಮೊದಲ ಪುಟದಿಂದ) ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಂದು ವಿಧಾನಸಭಾ ಕ್ಷೇತ್ರ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6ಎ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದೆ. ಮೊಬೈಲ್ ಆ್ಯಪ್ ಬಳಸಿ ಪರಿಶೀಲಿಸಿಕೊಳ್ಳ ಬಹುದು. ಮುಖ್ಯ ಚುನಾವ ಣಾಧಿಕಾರಿ, ಕರ್ನಾಟಕ ಇವರ ವೆಬ್‍ಸೈಟ್‍ನಲ್ಲಿ ಮತದಾರರು ತಮ್ಮ ಹೆಸರು ಇರುವ ಬಗ್ಗೆ ದೃಢಪಡಿಸಿ ಕೊಳ್ಳಬಹುದು.
9731979899 ಸಂಖ್ಯೆ ಏಂಇPIಅ ಎಂದು ಟೈಪ್ ಮಾಡಿ ಮತದಾರರ ಗುರುತಿನ ಚೀಟಿಯ ನಂಬರ್ ಟೈಪ್ ಮಾಡಿ ಎಸ್‍ಎಂಎಸ್ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ಮಾಹಿತಿ ಪಡೆಯಬಹುದು.
ಮತದಾರರ ಚುನಾವಣಾ ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ ಎಂಬದನ್ನು ಪ್ರತಿಯೊಬ್ಬರೂ ದೃಢಪಡಿಸಿ ಕೊಳ್ಳಬೇಕು. ಹೆಸರು ಇಲ್ಲದಿದ್ದಲ್ಲಿ ನಮೂನೆ-6ರಲ್ಲಿ ಅರ್ಜಿಯನ್ನು ತಾ. 22ರೊಳಗೆ ತಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ತಾಲೂಕು ಕಚೇರಿಗಳಿಗೆ ನೀಡಿ ಸೇರ್ಪಡೆ ಮಾಡಿಕೊಳ್ಳುವಂತೆ ಶ್ರೀವಿದ್ಯಾ ಅವರು ಮನವಿ ಮಾಡಿದರು.