ಒಡೆಯನಪುರ, ಜ. 18: ‘ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ರೈತರ ಆತ್ಮಹತ್ಯೆ, ಕಾಡಾನೆ ಸಮಸ್ಯೆ, ರೈತರ ಸಾಲಮನ್ನಾ ಮುಂತಾದ ಸಮಸ್ಯೆಗಳಿಗೆ ಸ್ಪಂದಿಸದಿರುವಂತಹ ರೈತ ವಿರೋಧಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ಜನರು ಕಿತ್ತೊಯ್ದು ರೈತರು ಹಾಗೂ ಜನರಹಿತವನ್ನು ಕಾಪಾಡುತ್ತಿರುವ ಜೆಡಿಎಸ್ ಪಕ್ಷವನ್ನು ಬೆಂಬಲಿಸುತ್ತಿರುವ ಕಾಲ ಬಂದಿದೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಅವರು ಕೊಡ್ಲಿಪೇಟೆ ಅಂಬೇಡ್ಕರ್ ಭವನದಲ್ಲಿ ನಡೆದ ಕೊಡ್ಲಿಪೇಟೆ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಬೂತ್ ಸಮಿತಿ ರಚನೆ, ಹಾಗೂ ತಾಲೂಕು ಮತ್ತು ಜಿಲ್ಲಾ ಸಮಿತಿಗಳಿಗೆ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಎಲ್.ವಿಶ್ವ ಮಾತನಾಡಿ, ಪಕ್ಷದ ಯುವ ಕಾರ್ಯಕರ್ತರು ಬೂತ್ ಸಮಿತಿಯನ್ನು ಬಲಪಡಿಸುವಲ್ಲಿ ಹೆಚ್ಚಿನ ಶ್ರಮವಹಿಸಬೇಕು ಎಂದರು. ಸಭೆಯಲ್ಲಿ ಮಡಿಕೇರಿ ವಿಧಾನಸಭೆ ಕ್ಷೇತ್ರದ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್, ಜೆಡಿಎಸ್ ರಾಜ್ಯ ಜಂಟಿ ಸಂಘಟನಾ ಕಾರ್ಯದರ್ಶಿ ಜೆ.ಆರ್.ತಮ್ಮಯ್ಯ, ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿದರು. ಸಭೆಯಲ್ಲಿ ಜೆಡಿಎಸ್ ಜಿಲ್ಲಾ ವಕ್ತಾರ ಎಂ.ಎ.ಆದಿಲ್‍ಪಾಷ ಮುಂತಾದವರು ಇದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಬೂತ್ ಸಮಿತಿ, ತಾಲೂಕು ಮತ್ತು ಜಿಲ್ಲಾ ಸಮಿತಿಗಳಿಗೆ ಪದಾಧಿಕಾರಿ ಗಳನ್ನು ನೇಮಿಸಲಾಯಿತು.